ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್‌ ಶರ್ಮಾ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್‌ ಶರ್ಮಾ (Bhajanlal Sharma) ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ಜೊತೆಗೆ ದಿಯಾ ಕುಮಾರಿ (Diya Kumari) ಮತ್ತು ಪ್ರೇಮ್ ಚಂದ್ ಬೈರ್ವಾ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ , ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಅರ್ಜುನ್ ರಾಮ್ ಮೇಘವಾಲ್ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂಗನೇರ್‌ನ ಬಿಜೆಪಿ ಶಾಸಕ ಭಜನ್‌ಲಾಲ್ ಶರ್ಮಾ ರಾಜಸ್ಥಾನದ ಪೂರ್ವ ಜಿಲ್ಲೆ ಭರತ್‌ಪುರದವರು. ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (RSS) ಬಲವಾದ ಬೆಂಬಲ ಹೊಂದಿದ್ದಾರೆಂದು ಪರಿಗಣಿಸಲಾಗಿದೆ. ಭಜನ್‌ಲಾಲ್ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಈಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ 1,45,162 ಮತಗಳನ್ನು ಪಡೆದು ಎದುರಾಳಿ ಕಾಂಗ್ರೆಸ್‌ ಅಭ್ಯರ್ಥಿ ಪುಷ್ಪೇಂದ್ರ ಭಾರದ್ವಾಜ್ ಅವರನ್ನು ಸೋಲಿಸಿದರು. ಭಾರದ್ವಾಜ್‌ 97,081 ಮತಗಳನ್ನು ಪಡೆದಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!