ಸೆ.30ರಿಂದ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಸೋನಿಯಾ,ಪ್ರಿಯಾಂಕಾ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಈಗಾಗಲೇ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸೆ.30ರಿಂದ ಆರಂಭವಾಗಲಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದ ಖಾಸಗಿ ಹೋಟೆಲ್​​ನಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಆಗಮಿಸಿ ಯಾತ್ರೆಯ ಸಿದ್ಧತೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ ಐದು ವಿಚಾರಗಳನ್ನು ಹೊಂದಿದ್ದು, ಎಲ್ಲ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.

ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್​ ಗಾಂಧಿ ಅವರ ಜೊತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜೊತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!