ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ಭಾರತರತ್ನ ಗೌರವ ಘೋಷಣೆಯಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ.
ಹೆಮ್ಮೆಯ, ಅಭಿನಂದನೀಯ ಸಂಗತಿ: ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು. ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು.
ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನೂ ಸುದೀರ್ಘ ಕಾಲ ಆ ದೇವರು ಅವರಿಗೆ ಉತ್ತಮ ಆರೋಗ್ಯದೊಂದಿಗೆ ನಮಗೆ ಪ್ರೇರಣೆ ನೀಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೋರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಮನೆಯವರಿಗೇ ಪ್ರಶಸ್ತಿ ಸಿಕ್ಕಿದಷ್ಟು ಖುಷಿ: ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆಯಾಗಿರುವುದು ನಮ್ಮ ಮನೆಯವರಿಗೇ ಪ್ರಶಸ್ತಿ ಸಿಕ್ಕಿದಷ್ಟು ಖುಷಿಯಾಗಿದೆ. ಮಹಾನ್ ವ್ಯಕ್ತಿಗೆ ಸಲ್ಲಬೇಕಾದ ಗೌರವ ಇದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಬಿಜೆಪಿ ಭೀಷ್ಮ: ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಎಲ್.ಕೆ.ಅಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೆ ನನ್ನ ಅಭಿವಂದನೆಗಳು. ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಅಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.