I.N.D.I.A ಮೈತ್ರಿಕೂಟದ ಭೋಪಾಲ್​ Rally ದಿಢೀರ್​ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯತ್ತ ಕಣ್ಣಿಟ್ಟಿರುವ I.N.D.I.A ಮೈತ್ರಿಕೂಟ ಭೋಪಾಲ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ಮೊದಲ ಜಂಟಿ ರ್ಯಾಲಿಯು ಮುಂದೂಡಿಕೆಯಾಗಿದೆ.

ಸೆಪ್ಟೆಂಬರ್​ 16 ರಂದು ಎನ್​ಸಿಪಿ ನಾಯಕ ಶರದ್​ ಪವಾರ್​ ಅವರ ದೆಹಲಿ ನಿವಾಸದಲ್ಲಿ ನಡೆದ ಕೂಟದ ಸಮನ್ವಯ ಸಭೆಯಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿತ್ತು.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ ಅವರು, ಭೋಪಾಲ್​ನಲ್ಲಿ ನಡೆಸಲು ಉದ್ದೇಶಿಸಿದ್ದ ಐಎನ್​ಡಿಐಎ ಕೂಟದ ಮೊದಲ ಸಾರ್ವಜನಿಕ ರ್ಯಾಲಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮೊನ್ನೆ ನಡೆದ ಸಮನ್ವಯ ಸಭೆಯಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ಸಮ್ಮಿಶ್ರ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಕಾರಣಾಂತರಗಳಿಂದ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ರ್ಯಾಲಿ ಆಯೋಜನೆಯ ಬಗ್ಗೆ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ಉದ್ದೇಶಿತ ರ್ಯಾಲಿಯ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ, ಭೋಪಾಲ್‌ನಲ್ಲಿ ನಡೆಸಲು ನಿರ್ಧರಿಸಿದ್ದ ರ್ಯಾಲಿಯು ಮುಂದೂಡಲಾಗಿದೆ ಎಂದು ಹೇಳಿದರು.

ಇತ್ತ ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್, ಭೋಪಾಲ್‌ನಲ್ಲಿ ಇಂಡಿಯಾ ಕೂಟದ ಮೊದಲ ಉದ್ದೇಶಿತ ರ್ಯಾಲಿಯನ್ನು ರದ್ದುಗೊಳಿಸಲಾಗಿಲ್ಲ. ಅಕ್ಟೋಬರ್​ನಲ್ಲಿ ನಡೆಸಲು ನಿರ್ಧರಿಸಿದ್ದ ಸಭೆಗೆ ಮತ್ತೊಂದು ದಿನಾಂಕವನ್ನು ಹೊಂದಿಸಲಾಗುತ್ತಿದೆ. ಶೀಘ್ರದಲ್ಲೇ ಬೇರೆ ದಿನ ನಿಗದಿ ಮಾಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!