October 9, 2026
Friday, October 9, 2026
spot_img

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಬೇಟೆ: ಬರೋಬ್ಬರಿ 1.58 ಕೋಟಿ ಮೌಲ್ಯದ ಎಂಡಿಎಂಎ ಸಹಿತ ಮೂವರ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದ್ದು, ಬಂಧಿತರಿಂದ ಸುಮಾರು 1,58,34,000 ರೂ. ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಕಾಸರಗೋಡು ಜಿಲ್ಲೆ ಮಂಗಳ್ಪಾಡಿ ಬೈದಲಾದ ಅನೀಸಾ ಮಂಜಿಲ್ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30), ಮಂಗಳೂರು ಪಾಂಡೇಶ್ವರದ ಓಲ್ಡ್ ಕೆಂಟ್ ರೋಡ್ ಆಯಿಷಾ ಅಪಾರ್ಟಮೆಂಟ್ ನಿವಾಸಿ ಅಲ್ತಾಫ್ (28) ಎಂದು ಹೆಸರಿಸಲಾಗಿದೆ.

ಆರೋಪಿಗಳು ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಉಳ್ಳಾಲ ತಾಲೂಕು ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ ಹಾಗೂ 3 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕು ಸ್ವೀಪ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,63,84,000 ರೂ. ಆಗಿದೆ.

ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ ನ ನೀರು ಸಂಗ್ರಹವಾಗುವ ಸ್ಥಳದಲ್ಲಿ ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ನಂತರ ಈ ಮಾದಕ ವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ಮತ್ತು ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ದ ದುಬೈ ದೇಶದ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 3 ವರ್ಷಗಳ ಕಾಲ ಜೈಲ್ ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿರುವುದಾಗಿದೆ. ಹಾಗೂ ಆರೋಪಿ ಅಲ್ತಾಫ್ ಎಂಬಾತನ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

Must Read