ಹೊಸದಿಗಂತ ಡಿಜಿಟಲ್ ಡೆಸ್ಕ್;
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು.
ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 5 ಕೋಟಿಗೆ ಬೇಡಿಕೆ ಇಟ್ಟಿದ್ದ ಗೋಪಾಲ್ ಜೋಶಿ. ಆದರೆ ದೇವಾನಂದ ದಂಪತಿತಿ 5 ಕೋಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾಗ 2 ಕೋಟಿ ರೂಪಾಯಿ ಹಣ ಪಡೆದಿದ್ದರು. 2 ಕೋಟಿ ಹಣಪಡೆದು ಟಿಕೆಟ್ ನೀಡದೇ ವಂಚಿಸಿದ್ದೂ ಅಲ್ಲದೇ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.