ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ವಜಾಗೊಳಿಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್‌ಸಿ) ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲೂ ದೀದಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ, ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ ನೇಮಕಗೊಂಡ 25,000ಕ್ಕೂ ಅಧಿಕ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದೆ ಎಂದು ಹೇಳಿದ ಪೀಠ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ.