October 28, 2026
Wednesday, October 28, 2026
spot_img

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ಗೆ ಭರ್ಜರಿ ಜಯ; ಮತದಾರರಿಗೆ ಬಿ. ವೈ. ವಿಜಯೇಂದ್ರ ಧನ್ಯವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟ 4-0 ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಯಶಸ್ಸಿನ ಬೆನ್ನಲ್ಲೇ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಮತದಾರರಿಗೆ ಹಾಗೂ ಮೈತ್ರಿಕೂಟದ ನಾಯಕರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಫಲಿತಾಂಶವು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸಾರ್ವಜನಿಕರು ನೀಡಿದ ದೊಡ್ಡ ಹಿನ್ನಡೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 

 ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಚುನಾವಣಾ ಫಲಿತಾಂಶದ ಪ್ರಮುಖ ವಿವರಗಳು ಮತ್ತು ರಾಜಕೀಯ ಬೆಳವಣಿಗೆಗಳನ್ನು ಹಂಚಿಕೊಂಡಿದ್ದಾರೆ. ಆಗ್ನೇಯ ಪದವೀಧರಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯು 23,000 ಮತಗಳ ಬೃಹತ್ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಕಾಂಗ್ರೆಸ್‌ನ ಐದು ಬಾರಿಯ ಎಂಎಲ್‌ಸಿ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಸೋಲಿಸುವ ಮೂಲಕ  ಗೆಲುವು ದಾಖಲಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ್ ವಿರುದ್ಧ 3,297 ಮತಗಳ ಅಂತರದಿಂದ ಜಯಗಳಿಸಿ, 5ನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಎಸ್.ವಿ. ಸಂಕನೂರು ಅವರು ಕಾಂಗ್ರೆಸ್‌ನ ಮೋಹನ್ ಲಿಂಬಿಕಾಯಿ ಅವರನ್ನು ಪರಾಜಯಗೊಳಿಸಿ, ಸತತ ಮೂರನೇ ಬಾರಿಗೆ ಜಯಭೇರಿ ಬಾರಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ತರಾಟೆಗೆ ತೆಗೆದುಕೊಂಡ ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರವು ಕೇವಲ ಗ್ಯಾರಂಟಿಗಳ ಭ್ರಮೆಯಲ್ಲಿ ಬದುಕುತ್ತಿದ್ದು, ಅಧಿಕಾರದ ಅಮಲಿನಲ್ಲಿದೆ. ರೈತರ ಸಮಸ್ಯೆಗಳನ್ನು ಆಲಿಸುವಲ್ಲಿ, ಬರ ಪರಿಹಾರ ನೀಡುವಲ್ಲಿ ಮತ್ತು ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಮತ್ತು ಸಚಿವರ ರಾಜೀನಾಮೆಗಳು ಈ ಸರ್ಕಾರದ ಭ್ರಷ್ಟಾಚಾರಕ್ಕೆ ಸ್ಪಷ್ಟ ಸಾಕ್ಷಿಯಾಗಿವೆ” ಎಂದು ಆರೋಪಿಸಿದರು. 

ಈ ತೀರ್ಪು ಕೇವಲ ನಾಲ್ಕು ಕ್ಷೇತ್ರಗಳಿಗೆ ಸೀಮಿತವಾಗಿಲ್ಲ, ಇದು ರಾಜ್ಯದ ಸುಮಾರು 120 ರಿಂದ 130 ವಿಧಾನಸಭಾ ಕ್ಷೇತ್ರಗಳ ಜನರ ಆಕ್ರೋಶದ ಸಂಕೇತವಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತೊಗೆಯಲು ಜನ ನಿರ್ಧರಿಸಿದ್ದಾರೆ ಮತ್ತು ಸಣ್ಣಪುಟ್ಟ ಗೊಂದಲಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಮುನ್ನಡೆಯುವಂತೆ ಮತದಾರರು ಬಿಜೆಪಿಗೂ ಸಂದೇಶ ನೀಡಿದ್ದಾರೆ ಎಂದು ವಿಜಯೇಂದ್ರ ಈ ಸಂದರ್ಭದಲ್ಲಿ ತಿಳಿಸಿದರು.

Must Read

Skip to toolbar