ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಗೂ ಮೊದಲು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ವಲಸಿಗರು ದೊಡ್ಡ ಸಂಖ್ಯೆಯಲ್ಲಿ ಪತ್ತೆಯಾಗಿದ್ದಾರೆ.
ನೇಪಾಳ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನಿಂದ ಅಕ್ರಮವಾಗಿ ನುಸುಳಿದವರಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಚುನಾವಣಾ ಆಯೋಗದ ಕ್ಷೇತ್ರ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದು, ಈ ವೇಳೆ ಅಕ್ರಮ ನಿವಾಸಿಗಳ ಮಾಹಿತಿ ಸಿಗುತ್ತಿದೆ. ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.
ಅಕ್ರಮವಾಗಿ ಪಟ್ಟಿ ಸೇರ್ಪಡೆಯಾದ ಮತದಾರರನ್ನು ಆಗಸ್ಟ್ 1ರ ನಂತರ ವಿಚಾರಣೆ ನಡೆಸಲಾಗುವುದು. ಸೆಪ್ಟೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅನರ್ಹ ವ್ಯಕ್ತಿಗಳನ್ನು ಪಟ್ಟಿಯಲ್ಲಿ ಸೇರಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಯಾವುದೇ ಸೂಕ್ತ ದಾಖಲೆಗಳಿಲ್ಲದ ನೇಪಾಳ, ಬಾಂಗ್ಲಾದೇಶ, ಮ್ಯಾನ್ಮಾರ್ನ ನಿವಾಸಿಗಳು ಇಲ್ಲಿ ಬಂದು ಸೇರಿಕೊಂಡಿರುವುದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ವಿದೇಶಿ ಅಕ್ರಮ ವಲಸಿಗರನ್ನು ಪಟ್ಟಿಯಿಂದ ಹೊರದಬ್ಬಲಾಗುವುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. 7 ಕೋಟಿಗೂ ಅಧಿಕ ಜನಸಂಖ್ಯೆಯಲ್ಲಿ ನಿಖರ ಮತದಾರರನ್ನು ಗುರುತಿಸಲು ಜೂನ್ 25ರಿಂದ ಪರಿಷ್ಕರಣಾ ಕಾರ್ಯ ನಡೆಯುತ್ತಿದೆ.