ಹೊಸದಿಗಂತ ಡಿಜಿಟಲ್ ಡೆಸ್ಕ್
ಮದ್ಯಪಾನ ನಿಷೇಧವಿರುವ ರಾಜ್ಯವಾದ ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಮದ್ಯ ಸೇವಿಸಿ 11 ಜನರು ಸಾವನ್ನಪ್ಪಿದ್ದು, 12 ಮಂದಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಛಾಪ್ರಾ ಪಟ್ಟಣದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಜಿಲ್ಲಾಧಿಕಾರಿ ರಾಜೇಶ್ ಮೀನಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್, ಕಳ್ಳಬಟ್ಟಿ ತಯಾರಿಕೆ ಮತ್ತು ಮಾರಾಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಈಗಾಗಲೇ ಐವರನ್ನು ಬಂಧಿಸಲಾಗಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮತ್ತು ಸ್ಥಳೀಯ ಚೌಕಿದಾರ್ ನನ್ನು ಸಹ ಅಮಾನತುಗೊಳಿಸಲಾಗಿದೆ.
ʼ ಮೇಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ವಾರಿಯಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಗುರುವಾರ ಕಳ್ಳಬಟ್ಟಿ ಪಾನೀಯವನ್ನು ಸೇವಿಸಿದ ಹಲವರು ಅಸ್ವಸ್ಥರಾಗುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ತಕ್ಷಣವೇ ಪೊಲೀಸ್, ಅಬಕಾರಿ ಮತ್ತು ವೈದ್ಯಕೀಯ ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಅಸ್ವಸ್ಥರಾದವರನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಸ್ಥಿತಿಯಲ್ಲಿರುವವರನ್ನು ಪಾಟ್ನಾದ ಪಿಎಂಸಿಎಚ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ. ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಂಸಿಎಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೇರಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಯನ್ನು ಘಟನೆಯ ಬಗ್ಗೆ ತಿಳಿಯುವ ಮೊದಲೇ ಅಂತ್ಯಕ್ರಿಯೆ ನಡೆಸಲಾಗಿದೆ. ಪಿಎಂಸಿಎಚ್ ಆಸ್ಪತ್ರೆಯಲ್ಲಿ ಇನ್ನೂ 12 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ