ಬೈಕ್‌- ಕಾರು ಡಿಕ್ಕಿ: ಸ್ಥಳದಲ್ಲಿಯೇ ಮುಖ್ಯಶಿಕ್ಷಕ ಸಾವು

ಹೊಸದಿಗಂತ ವರದಿ, ನಾಗಮಂಗಲ :

ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನ ಬೈಕ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮುಖ್ಯಶಿಕ್ಷಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಜೋಡಿನೇರಲಕೆರೆ ಗೇಟ್ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎಚ್.ಭೂವನಹಳ್ಳಿ ಗ್ರಾಮದ ರಾಮಕೃಷ್ಣೇಗೌಡ(59) ಎಂಬುವರೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿ ಮುಖ್ಯಶಿಕ್ಷಕರಾಗಿದ್ದಾರೆ.

ತಾಲೂಕಿನ ಇಜ್ಜಲಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಇವರು ಕರ್ತವ್ಯ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಾಗಮಂಗಲದಿಂದ ಮೈಸೂರು ಕಡೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಬಳಿಕ ರಾಮಕೃಷ್ಣೇಗೌಡರ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

ಘಟನೆಯಿಂದಾಗಿ ಕಾರು ಮತ್ತು ಬೈಕ್ ನಜ್ಜುಗಜ್ಜಾಗಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆಯ ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!