ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆ ವೇಳೆ ಬೈಕ್ ಸವಾರನೊಬ್ಬನ ಹೆಲ್ಮೆಟ್ ಅನ್ನು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ನೆಲಕ್ಕೆ ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತರು ರೈತರ ಪರ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನೊಬ್ಬ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದ ಮಧ್ಯೆಯೇ ವಾಹನ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರು ಬೈಕ್ ಸವಾರನ ಹೆಲ್ಮೆಟ್ ಅನ್ನು ತೆಗೆದು ನೆಲಕ್ಕೆ ಬಡಿದು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕೆಲ ಬಿಜೆಪಿ ಕಾರ್ಯಕರ್ತರು ಬೈಕ್ ಟೈರ್‌ನ ಗಾಳಿಯನ್ನೂ ಬಿಟ್ಟಿದ್ದಾರೆ ಎನ್ನಲಾಗಿದೆ.
“ರೈತರಿಗಾಗಿ ಹೋರಾಟ ನಡೆಯುತ್ತಿರುವುದು ಗೊತ್ತಾಗುವುದಿಲ್ಲವೇ?” ಎಂದು ಬೈಕ್ ಸವಾರನನ್ನು ಪ್ರಶ್ನಿಸಿದ ಕಾರ್ಯಕರ್ತರು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ.ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಬೈಕ್ ಸವಾರನನ್ನು ಸುರಕ್ಷಿತವಾಗಿ ಅಲ್ಲಿಂದ ಕಳುಹಿಸಿದ್ದಾರೆ.
ಇದನ್ನೂ ಓದಿ:
ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ
ಮಳೆ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.



