ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೈಕೋರ್ಟ್ ಈಗಾಗಲೇ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ನಿಷೇಧ ಹೇರಿದ್ದರೂ, ರ‍್ಯಾಪಿಡೋ ಮತ್ತು ಉಬರ್ ಸೇರಿದಂತೆ ಹಲವು ಬೈಕ್ ಟ್ಯಾಕ್ಸಿ ಕಂಪನಿಗಳು ಇನ್ನೂ ತಮ್ಮ ಸೇವೆ ಮುಂದುವರೆಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸಲು ಏಳು ದಿನಗಳ ಗಡುವು ನೀಡಿವೆ.
ಇತ್ತೀಚೆಗೆ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವಂತೆಯೇ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿತವಾಗಿರುವುದು ಖಚಿತವಾಗಿದೆ. ಆದರೆ ಕೆಲವು ಕಂಪನಿಗಳು ನಿಯಮ ಉಲ್ಲಂಘನೆ ಮಾಡಿ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ ಎಂದು ಖಾಸಗಿ ಸಾರಿಗೆ ಸಂಘಟನೆಗಳು ಆರೋಪಿಸುತ್ತಿವೆ.
ಸಾರಿಗೆ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಎಲ್ಲಾ ಆಟೋ, ಬಸ್ ಮತ್ತು ಟ್ಯಾಕ್ಸಿಗಳನ್ನು ವೈಟ್ ಬೋರ್ಡ್ ಮಾಡಿಸಿ ಯಾವುದೇ ತೆರಿಗೆ ಕಟ್ಟದೆ ಸಂಚಾರ ನಡೆಸುತ್ತೇವೆ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ. ಇದು ಸಾರಿಗೆ ಇಲಾಖೆಗೆ ದೊಡ್ಡ ಸವಾಲಾಗುವ ಸಾಧ್ಯತೆ ಇದೆ.
ಹೈಕೋರ್ಟ್ ಮುಂದೆ ನಡೆದ ವಿಚಾರಣೆಯಲ್ಲಿ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರ ಬೈಕ್ ಟ್ಯಾಕ್ಸಿ ಪ್ರಸ್ತಾವನೆ ಪರಿಶೀಲಿಸುತ್ತಿರುವುದರಿಂದ, ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ ಮೇಲೆ ಕ್ರಮ ಕೈಗೊಳ್ಳಬಾರದು ಎಂದು ಹೇಳಿದ್ದರೂ, ಅಗ್ರಿಗೇಟರ್ ಕಂಪನಿಗಳ ವಿರುದ್ಧ ಕ್ರಮಕ್ಕೆ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಹೈಕೋರ್ಟ್, ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ನಿಲುವು ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿ, ಸೆಪ್ಟೆಂಬರ್ 22ಕ್ಕೆ ವಿಚಾರಣೆ ನಿಗದಿಪಡಿಸಿದೆ.