ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.
ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು .
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಇದೀಗ ಇಲ್ಲೂ ಸಹ ಜಾಮೀನು ಅರ್ಜಿ ವಜಾಗೊಂಡಿದೆ. ಹೀಗಾಗಿ ಬೈರತಿ ಬಸವರಾಜ್ ಪರ ವಕೀಲರು, ಹೈಕೋರ್ಟ್ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 26ರಂದು ಹೈಕೋರ್ಟ್ ರಜಾಕಾಲದ ಪೀಠ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಅಂದೇ ಬೈರತಿ ಬಸವರಾಜ್ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ನಲ್ಲೂ ಜಾಮೀನು ಅರ್ಜಿ ತಿರಸ್ಕೃತಗೊಂಡಿರೆ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ.
ಮೊನ್ನೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬಂಧನ ಭೀತಿಯಿಂದಾಗಿ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಕೊನೆಯದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಲೈವ್ ಲೊಕೇಶನ್ ಪತ್ತೆಯಾಗಿದ್ದು, ಆನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಇತ್ತ ಸಿಐಡಿ ಅಧಿಕಾರಿಗಳು ಸಹ ತೀವ್ರ ಹುಡುಕಾಟ ನಡೆಸಿದ್ದು, ಯಾವುದೇ ಸಂದರ್ಭದಲ್ಲೂ ಬೈರತಿ ಬಸವರಾಜ್ ಅರೆಸ್ಟ್ ಆಗಬಹುದು.

