March 27, 2026
Friday, March 27, 2026
spot_img

ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ

ಹೊಸದಿಗಂತ ವರದಿ ಬೆಳಗಾವಿ :

ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯ ನಗರದಲ್ಲಿರುವ ಮಾಲಿನಿ ಸಿಟಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಬಿಜೆಪಿ ನಾಯಕರು. ಬಳಿಕ ಮಾಲಿನಿ‌ ಸಿಟಿಯಿಂದ ಬೃಹತ್ ರ‌್ಯಾಲಿ ಮೂಲಕ ಪಾದಯಾತ್ರೆ ನಡೆಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಪೊಲೀಸರ ಬಿಗಿ ಬಂದೂಬಸ್ತ ಮಾಡಿರುವುದರಿಂದ ಮುತ್ತಿಗೆ ಯತ್ನ ವಿಫಲಗೊಳಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ನೂರಾರು ಪ್ರಮುಖ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ರೈತ ವಿರೋಧಿ ಸರಕಾರದ ಎಂದು ದಿಕ್ಕಾರ ಕೂಗುತ್ತಿರುವ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಪೊಲೀಸರ ಪ್ರಯತ್ನದ ವೇಳೆ ಕೆಲಹೊತ್ತು ಹೈಡ್ರಾಮಾ ಸೃಷ್ಟಿಯಾಗಿ, ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ವಾಗ್ವಾದ ನಡೆಯಿತು. 50ಕ್ಕೂ ಅಧಿಕರ ಪ್ರತಿಭಟನಾಕಾರರ ವಶಕ್ಕೆ ಪಡೆಯಲಾಯಿತು.

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಆರ್. ಅಶೋಕ, ಶಾಸಕರಾದ ಚಲುವಾದಿ, ರವಿಕುಮಾರ್, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ ಸೇರಿ 50ಕ್ಕೂ ಹೆಚ್ಚು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಇದು ಲಜ್ಜೆಗೆಟ್ಟ ರೈತ ವಿರೋಧಿ ಸರಕಾರ – ವಿಜಯೇಂದ್ರ ಸರಕಾರದ ವಿರುದ್ದ ಅಸಮಾಧಾನ ಹೋರ ಹಾಕಿದರು.
ಸುವರ್ಣಸೌಧ ಮುತ್ತಿಗೆ ಹಾಕುವ ಮುನ್ನ ನಡೆದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರೈತರ ಪರವಾಗಿ ಪ್ರತಿಭಟನೆ ನಡೆಸಿದ್ದೇವೆ.

ಇಂದು ದಾವಣಗೆರೆಯಲ್ಲಿ ಹೋರಾಟಕ್ಕೆ ಚಾಲನೆ ನೀಡಿದ್ದ ನಾನು, ಇಲ್ಲಿ ಮುತ್ತಿಗೆ ಹಾಕಲು ಬಂದಿದ್ದೇವೆ. ಅತೀವೃಷ್ಟಿ ಬೆಳೆ ಹಾನಿಗೆ ರಾಜ್ಯ ಸರಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಬೆಳೆ ಪರಿಹಾರವನ್ನು ತಕ್ಷಣ ರೈತರಿಗೆ ಕೊಡಬೇಕು. ಇದು ಲಜ್ಜೆಗೆಟ್ಟ ದರಿದ್ರ ರೈತ ವಿರೋಧಿ ಕಾಂಗ್ರೆಸ್ ಸರಕಾರ ಎಂದು ಕಿಡಿಕಾರಿದರು.

ಯತೀಂದ್ರ ಹೇಳಿಕೆಗೂ ಟಾಂಗ್

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ, ನಮ್ಮ ತಂದೆ ಐದು ವರ್ಷ ಸಿಎಂ ಆಗಿ ಇರುತ್ತಾರೆ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತಾರೆ ಅನ್ನೋದು ಮುಖ್ಯ ಅಲ್ಲ. ರೈತರ ಪರವಾಗಿ ಏನು ಕೆಲಸ ಮಾಡಿದ್ದಾರೆ ಅನ್ನೋದು ಮುಖ್ಯ. ಆಂತರಿಕ ಕಚ್ಚಾಟದಿಂದ ವಾರದಲ್ಲಿ ಮೂರು ದಿನ ದಿಲ್ಲಿಗೆ ಹೋಗಿ ಕೂರುತ್ತಾರೆ ಎಂದು ವಿಜಯೇಂದ್ರ ತಿಳಿಸಿದರು.

ಕಬ್ಬು ಬೆಳೆಗಾರರಿಗೆ ಹೆಚ್ಚು ದರ ಕೊಡಿ ಕಬ್ಬು ಬೆಳೆಗೆ ಎಫ್‌ಆರ್‌ಪಿ ಎಫ್ ಆರ್ ಪಿ ನಿಗದಿ ಮಾಡಿದ್ದರೂ, ಆ ದರಕ್ಕಿಂತ ಹೆಚ್ಚಿನ ದರ ನೀಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ. ಕಬ್ಬು ಬೆಳೆಗಾರರಿಗೆ ಹೆಚ್ಚು ದರ ಕೊಡಲು ನಿಮಗೆ ಏನು ಕಷ್ಟ? ನಾನು ರೈತರಿಗೆ ಒಂದು ಭರವಸೆ ನೀಡುತ್ತೇನೆ.
ಈ ಹಿಂದೆ ಯಡಿಯೂರಪ್ಪ ಅವರು ರೈತರು ಸಂಕಷ್ಟದಲ್ಲಿದ್ದಾಗ ಅವರೊಂದಿಗೆ ಇರುತ್ತಿದ್ದರು. ಅದೇ ರೀತಿ ನಾನು ಹಾಗೂ ನಮ್ಮ ಪಕ್ಷವು ಯಾವಾಗಲೂ ರೈತರ ಜೊತೆ ಇರುತ್ತೇವೆ. ಸರಕಾರ ತಕ್ಷಣ ಮೆಕ್ಕೆಜೋಳ ಸೇರಿದಂತೆ ಯಾವುದೇ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸದಿರುವುದು ರೈತ ವಿರೋಧಿ ನೀತಿಯಾಗಿದ್ದು, ಇಂತಹ ಸರಕಾರಕ್ಕೆ ಉಳಿಗಾಲವಿಲ್ಲ ಎಂದು ವಿಜಯೇಂದ್ರ ರೈತರ ಮೂಲಕ ಎಚ್ಚರಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !