ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಆಹೋರಾತ್ರಿ ಧರಣಿ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಒಂದರ ಮೇಲೆ ಒಂದು ಬೆಲೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿ ಆರಂಭಗೊಂಡಿದೆ.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ , ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ, ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು ಮಾರುವೇಷದಲ್ಲಿ ತೆರಳಿ ಪ್ರಜೆಗಳ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಳಿಕ ಜನರಿಗೆ ಅನುಕೂಲ ಆಗುವ ಯೋಜನೆ ಜಾರಿಗೊಳಿಸುತ್ತಿದ್ದರು. ಮಹಾರಾಜರ ಸ್ಥಾನದಲ್ಲಿರುವ ನೀವು ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ ಡಿ.ಕೆ.ಶಿವಕುಮಾರರನ್ನೂ ಜೊತೆಗೇ ಕರೆದುಕೊಂಡು ಹೋಗಿ ಎಂದು ವ್ಯಂಗ್ಯವಾಗಿ ತಿಳಿಸಿದರು.

ಬಡವರು, ರೈತರು, ಜನಸಾಮಾನ್ಯರು ಇವತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದ ದುಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಹಾಲಿನ ದರ, ಸರಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ನಿನ್ನೆಯಷ್ಟೇ ಡೀಸೆಲ್ ಬೆಲೆ 2 ರೂ. ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ಇದರಿಂದ ಸರಕುಗಳ ದರವೂ ಹೆಚ್ಚಾಗಲಿದೆ ಎಂದು ತಿಳಿಸಿದರು.

ಏಪ್ರಿಲ್ 7ರಿಂದ ಜನಾಕ್ರೋಶ ಯಾತ್ರೆ
ಏಪ್ರಿಲ್ 7ರಿಂದ ಜನಾಕ್ರೋಶ ಯಾತ್ರೆ ಪ್ರಾರಂಭಿಸುತ್ತೇವೆ. ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿಯವರು ಉದ್ಘಾಟಿಸುತ್ತಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಕಾನೂನುಬಾಹಿರವಾಗಿ ಶೇ 4 ಮೀಸಲಾತಿ ನೀಡಿದ್ದಾರೆ. ಮತ್ತೊಂದು ಕಡೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇನ್ನೊಂದು ಕಡೆ ಬೆಲೆ ಏರಿಕೆ ನಿರಂತರವಾಗಿದೆ. ಇವೆಲ್ಲವನ್ನೂ ವಿರೋಧಿಸಿ ಜನಾಕ್ರೋಶ ಯಾತ್ರೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಹಿರಿಯ ಮುಖಂಡರಾದ ಸಿ.ಟಿ.ರವಿ, ಬಿ.ಶ್ರೀರಾಮುಲು, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಎಲ್ಲಾ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಮೋರ್ಚಾ, ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಹಾಗೂ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರೂಪಿಸಿದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!