Friday, July 1, 2022

Latest Posts

ಈ ಬಾರಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಖಚಿತ: ಸಚಿವ ಎ.ನಾರಾಯಣಸ್ವಾಮಿ ವಿಶ್ವಾಸ

ಹೊಸದಿಗಂತ ವರದಿ,ಚಿತ್ರದುರ್ಗ:

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತನನ್ನು ಅಭ್ಯರ್ಥಿ ಮಾಡಿದೆ. ಅಲ್ಲದೇ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಸ್ಥಳೀಯ ವ್ಯಕ್ತಿಯಾಗಿದ್ದು, ಈ ಬಾರಿ ಗೆಲುವು ಖಚಿತ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆ.ಎಸ್.ನವೀನ್ ಅವರು ಕಳೆದ ಎರಡು ಚುನಾವಣೆಗಳಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ. ಆದರೂ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಜಿಲ್ಲಾಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ಪಕ್ಷ ಈ ಬಾರಿಯೂ ಅವರಿಗೆ ಟಿಕೆಟ್ ನೀಡಿದ್ದು, ಈ ಬಾರಿ ಗೆಲುವ ಪಡೆಯಲಿದ್ದಾರೆ ಎಂದರು.
ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ. ಎಲ್ಲರೂ ನವೀನ್ ಅವರ ಜೊತೆ ಬಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದೇವೆ. ಎಲ್ಲರ ಬೆಂಬಲ ಬಿಜೆಪಿ ಅಭ್ಯರ್ಥಿಗೆ ಇದೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮತದಾರರು ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ನಾಲ್ಕು ತಂಡಗಳನ್ನು ಮಾಡಿಕೊಂಡು ಬಿಜೆಪಿ ಜನ ಸ್ವರಾಜ್ ಯಾತ್ರೆ ನಡೆಸಲಾಗಿದೆ. ರಾಜ್ಯದ ೨೫ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗಿದೆ. ಹಾಗಾಗಿ ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ ೧೪ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆಯಲಿದೆ. ಕಾಂಗ್ರೆಸ್‌ನವರು ಹತಾಶೆಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಕಣ್ಣಿಗೆ ಪಟ್ಟಿ ಕಟ್ಟದ ಕುರುಡು ಕುದುರೆಗಳಂತೆ ಡಿಕೆಶಿ ಹಾಗೂ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಒಂದು ಕಡೆ ಗೆದ್ದ ಬಳಿಕ ೨೦೨೩ರಕ್ಕೆ ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ದೂರದ ಮಾತು. ಈಗ ಬಂದಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲು ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಕೇಂದ್ರ ಹಾಗೂ ರಆಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡಿವೆ. ಅನೇಕ ಅಭಿವೃದ್ಧಿ ಕೆಲಸಗಳು ಜನರ ಮನದಲ್ಲಿವೆ. ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಕಳೆದ ಎರಡು ಚಿನಾವಣೆಗಳಲ್ಲಿ ಪರಾಭವಗೊಂಡರೂ ದೃತಿಗೆಡದೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಹಾಗಾಗಿ ಈ ಬಾರಿಯೂ ಪಕ್ಷ ಟಿಕೆಟ್ ನೀಡಿದೆ. ಹಾಗಾಗಿ ಪಕ್ಷದ ತೀರ್ಮಾನದಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ನವೀನ್ ಅವರನ್ನು ಗೆಲ್ಲಿಸಿಕೊಳ್ಳುತ್ತೇವೆ ಎಂದರು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಪಕ್ಷ ನೀಡುವ ಯಾವುದೇ ಜವಾಬ್ಧಾರಿಯನ್ನು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇವೆ. ಅದರಂತೆ ಈಗ ಪಕ್ಷ ನಮಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕೆ.ಎಸ್.ನವೀನ್ ಅವರನ್ನು ಗೆಲ್ಲಿಸುವ ಜವಾಬ್ಧಾರಿ ನೀಡಿದೆ. ಎಲ್ಲರೂ ಒಂದುಗೂಡಿ ಕೆಲಸ ಮಾಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.
ಅಭ್ಯರ್ಥಿ ಕೆ.ಎಸ್.ನವೀನ್ ಮಾತನಾಡಿ, ಎರಡೂ ಜಿಲ್ಲೆಯ ಸಂಸದರು, ಶಾಸಕರು, ಸಚಿವರು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಇವರೆಲ್ಲರ ಬೆಂಬಲದಿಂದ ಈ ಬಾರಿ ಗೆಲುವು ಪಡೆಯುತ್ತೇನೆ. ಸ್ಥಳೀಯ ಅಭ್ಯರ್ಥಿಯಾದ ನನ್ನನ್ನು ಮತದಾರರು ಬೆಂಬಲಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಜಗಳೂರು ಶಾಸಕ ರಾಮಚಂದ್ರ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯಪಾಲ್, ಜಿ.ಟಿ.ಸುರೇಶ್, ಮುಖಂಡರಾದ ಅನಿತ್‌ಕುಮಾರ್, ರಘುಚಂದನ್ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮಾರ್ಗ ಮಧ್ಯದಲ್ಲಿ ಕಾರ್ಯಕರ್ತರು ಕ್ರೇನ್ ಮೂಲಕ ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಅಭ್ಯರ್ಥಿ ಕೆ.ಎಸ್.ನವೀನ್ ಅವರಿಗೆ ಶುಭ ಕೋರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss