ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಮುಂದಿನ ತಿಂಗಳ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಹಂತೇಶ ಕವಟಗಿಮಠ ಬಿಜೆಪಿ ಅಭ್ಯರ್ಥಿಗೆ, ಪಕ್ಷೇತರ ಅಭ್ಯರ್ಥಿ ಲಖನ್ ಅವರಿಂದ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯದ ಮತದಲ್ಲಿ ಗೆದ್ದೇ ಗೆಲ್ಲುತ್ತಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಅವರು ನಮ್ಮ ಪಕ್ಷದಲ್ಲಿಲ್ಲ ಎಂದರು.
ಲಖನ್ ಅವರು ತಮ್ಮದೇ ನಿರ್ಧಾರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಮಧ್ಯೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರಲ್ಲಿ ಮಾತಾಡಿ, ಮಾಹಿತಿ ಪಡೆದಿದ್ದೇನೆ. ರಮೇಶ್ ಜಾರಕಿಹೊಳಿ ಅವರು ನಾವು ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ನಿನ್ನೆ ನಮ್ಮ ಪಕ್ಷದ ಅಭ್ಯರ್ಥಿಗಳ ಜೊತೆಗೆ ಬಂದು ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ ಎಂದು ಹೇಳಿದ್ದು, ನಮ್ಮ ಅಭ್ಯರ್ಥಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.