April 2, 2026
Thursday, April 2, 2026
spot_img

ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ಪಿತೂರಿ: ಮಮತಾ ಬ್ಯಾನರ್ಜಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳದ ಮಾಲ್ಡಾದಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆದ ದಾಳಿ ವಿಚಾರವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ಪಿತೂರಿ ನಡೆಸುತ್ತಿದೆ ಆರೋಪಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಒಂದೆಡೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ. ಮತ್ತೊಂದೆಡೆ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ತಪ್ಪು ಚಿತ್ರಣ ನೀಡುವ ಮೂಲಕ ಕೇಂದ್ರದ ಆಡಳಿತ ಹೇರುವುದು ಬಿಜೆಪಿಯ ಮುಖ್ಯ ಉದ್ದೇಶ ಎಂದು ಟೀಕಿಸಿದರು.

ನ್ಯಾಯಾಂಗ ಅಧಿಕಾರಿಗಳಿದ್ದ ಕಚೇರಿಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಜವಾಬ್ದಾರರು ಯಾರೆಂದು ನನಗೆ ನಿಜಕ್ಕೂ ತಿಳಿದಿಲ್ಲ. ಈ ಬಗ್ಗೆ ಮಾಹಿತಿಯೇ ಇಲ್ಲ, ಇದೆಲ್ಲ ಬಿಜೆಪಿಯ ಪಿತೂರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಆಯೋಗವು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೂಚನೆಯಂತೆ ನಡೆದುಕೊಳ್ಳುತ್ತಿದೆ. ನನ್ನ ಕೈನಲ್ಲಿ ಯಾವ ಆಡಳಿತವೂ ಇಲ್ಲ. ನನ್ನ ಅಧಿಕಾರ ಎಲ್ಲವೂ ಆಯೋಗದ ಹಿಡಿತದಲ್ಲಿದೆ​ ಎಂದು ಟೀಕಿಸಿದರು.

ಏಳು ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಹೇಳಿಕೆ ಸದ್ಯ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !