Monday, October 13, 2025

ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ: ಪರಿಹಾರ ಧನ ತಕ್ಷಣ ಬಿಡುಗಡೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಪರಿಶೀಲಿಸಿತು.

ಈ ವೇಳೆ ಸಂಸದ ಪಿ.ಸಿ. ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಆರ್. ಅಶೋಕ, ರಾಜ್ಯದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಮಲೆನಾಡು ಭಾಗದಲ್ಲಿ ಭೂಕುಸಿತ, ಉತ್ತರ ಕರ್ನಾಟಕ ಭಾಗದಲ್ಲಿ ಭೂಕುಸಿತದಿಂದ ಜನರು ಸಮಸ್ಯೆಗೆ ಸಿಲುಕಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡುವ ಮೂಲಕ ಜನರ ನೆರವಿಗೆ ಬರಬೇಕು ಎಂದು ಹೇಳಿದರು.

ಪ್ರವಾಹ ಸೇರಿದಂತೆ ಇನ್ನಿತರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಪರಿಹಾರ ನೀಡಲಾಗಿತ್ತು. ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ. ಶೀಘ್ರವೇ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಬೇಕು. ರಾಜ್ಯ ಸರ್ಕಾರ ಬೆಳೆಹಾನಿಯ ಬಗ್ಗೆ ಸಮೀಕ್ಷೆ ನಡೆಸುವ ಜೊತೆಗೆ ಹಾನಿಗೊಳಗಾದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸಿ.ಟಿ. ರವಿ ಮಾತನಾಡಿ, ಜಿಲ್ಲೆಯಲ್ಲಿ ಹತ್ತಿ, ತೊಗರಿ, ಕಬ್ಬು ಬೆಳೆ ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕು ಎಂದು ಹೇಳಿದರು.

error: Content is protected !!