November 19, 2026
Thursday, November 19, 2026
spot_img

ಜನಹಿತ ಕಡೆಗಣಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರು ಮಧ್ಯಪ್ರವೇಶಿಸಲಿ: ಬಿಜೆಪಿ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ:

ರಾಜ್ಯದಲ್ಲಿ ಜನಹಿತವನ್ನು ಕಡೆಗಣಿಸಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಮರ್ಪಕ ಆಡಳಿತ ನೀಡುವಂತೆ ನಿರ್ದೇಶನ ನೀಡಲು ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಗುರುವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿದ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ದ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾ ರ‍್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪತ್ರಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು, ಕಳೆದ ಮೂರೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಹಾಲಿನ ದರ ಹೆಚ್ಚಿಸಿದರೂ ಅದರ ಸಂಪೂರ್ಣ ಲಾಭ ರೈತರಿಗೆ ತಲುಪಿಲ್ಲ. ಸರ್ಕಾರಿ ಸೇವೆಗಳ ಶುಲ್ಕ ಹಾಗೂ ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದರು ಅಸಮಾಧಾನ ‌ಹೋರ ಹಾಕಿದರು.

ರಾಜ್ಯದ 150ಕ್ಕೂ ಹೆಚ್ಚು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ಜಾನುವಾರುಗಳಿಗೆ ಮೇವಿನ ಸಮಸ್ಯೆಯೂ ತಲೆದೋರಿದೆ. ಆದರೂ ಸಚಿವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿಲ್ಲ, ರೈತರಿಗೆ ಅಗತ್ಯ ನೆರವು ಒದಗಿಸುವಲ್ಲಿಯೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶವನ್ನು ಹೋರ ಹಾಕಿದರು. ‌ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆಗಳು ಇನ್ನೂ ಸಮರ್ಪಕವಾಗಿ ಈಡೇರಿಲ್ಲ. ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ವಿವಿಧ ಭ್ರಷ್ಟಾಚಾರ ಆರೋಪಗಳು ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸುವಂತಿವೆ ಎಂದು ಟೀಕಿಸಿದರು.

ರಾಜ್ಯದ ಆರ್ಥಿಕ ಸಂಪನ್ಮೂಲಗಳ ದುರುಪಯೋಗ, ಜನವಿರೋಧಿ ನೀತಿ ಹಾಗೂ ಆಡಳಿತ ವೈಫಲ್ಯಗಳಿಂದ ರಾಜ್ಯದ ಹಿತಕ್ಕೆ ಧಕ್ಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಜನಪರ ಆಡಳಿತಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು.

ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ ಜಾಧವ, ಉತ್ತರ ಮಂಡಲ ಅಧ್ಯಕ್ಷ ವಿಜಯ ಕೊಡಗನೂರ, ದಕ್ಷಿಣ ಮಂಡಲ ಅಧ್ಯಕ್ಷೆ ರಾಜಕುಮಾರಿ ಪಾವಲೆ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.

Must Read