ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ವಿಚಾರವಾಗಿ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಬೆಂಗಳೂರು ನಗರವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ಪ್ರಮುಖ ನಗರವಾಗಿದೆ. ಇಲ್ಲಿನ ಜಲಸಂಕಷ್ಟ ಸಾಧ್ಯತೆಯನ್ನು ಮನಗಂಡು ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನ ಮಾಡುವಂತೆ ಬಿಜೆಪಿ ಮನವಿ ಮಾಡಿದೆ.
ರಾಜ್ಯ ಸರ್ಕಾರವು ಸದರಿ ದಿನಗಳಲ್ಲಿ ನೀರಿನ ಒಳ ಹರಿವನ್ನು ಪರಿಗಣಿಸದೆ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಿ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡಿದೆ. ಇದರಿಂದ ರಾಜ್ಯದ ರೈತರಿಗೆ ಧಕ್ಕೆಯಾಗುವುದಲ್ಲದೆ ರಾಜ್ಯದ ರಾಜಧಾನಿ ಬೆಂಗಳೂರಿಗೆ ಜೊತೆಗೆ ರಾಜ್ಯದ ಜನತೆಗೆ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪು ಹಾಗೂ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಮಾರ್ಪಡಿಸಿದ ಆದೇಶದನ್ವಯ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ರಾಜ್ಯವು ತನ್ನ ಗಡಿಯ ಒಳ ಭಾಗದಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೈಗೊಳ್ಳಲು ಅವಕಾಶವಿರುತ್ತದೆ ಎಂದು ಪ್ರತಿಪಾದಿಸಿ ಬಿಜೆಪಿಯು ಕೆಲವು ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ.