ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ. ನಡ್ಡಾ ಅವರ ಅಧಿಕಾರಾವಧಿಯನ್ನು 2024 ರ ಲೋಕಸಭಾ ಚುನಾವಣೆಯ ಅಂತ್ಯದವರೆಗೆ ವಿಸ್ತರಿಸುವ ಸಾಧ್ಯತೆಯಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಮೂರು ವರ್ಷಗಳ ಅಧಿಕಾರಾವಧಿ ಇದೇ ತಿಂಗಳು ಕೊನೆಗೊಳ್ಳಲಿದೆ. ದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳು ಮತ್ತು ಸಂಸತ್ ಚುನಾವಣೆಗೆ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯಲಿದೆ. ರಾಜಕೀಯ ಮತ್ತು ಆರ್ಥಿಕ ವಿಷಯಗಳ ಚರ್ಚೆ ಮತ್ತು ನಿರ್ಣಯಗಳನ್ನು ಬಿಜೆಪಿ ಅನುಮೋದಿಸುತ್ತದೆ.
ಸಭೆ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಟೇಲ್ ಚೌಕ್‌ನಿಂದ ಎನ್‌ಎನ್‌ಡಿಸಿವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧ ಹೇರಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಯೋಜನೆ ರೂಪಿಸಿದೆ. 3,000-3500 ವಿಸ್ತಾರಕ್‌ಗಳನ್ನು ದೇಶದ ವಿವಿಧ ಭಾಗಗಳಿಗೆ ಕಳುಹಿಸಲಾಗುತ್ತಿದೆ. ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿಸ್ತಾರಕ್‌ಗಳನ್ನು ನೇಮಿಸಿದೆ. ತ್ರಿಪುರಾ, ಮಧ್ಯಪ್ರದೇಶ, ಕರ್ನಾಟಕ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಈ ವರ್ಷ ಚುನಾವಣೆಗಳಿವೆ.