ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆಗಳು ಹೆಚ್ಚಾಗಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.
ಕಳೆದ ಬಾರಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವಿಸ್ ಈ ಬಾರಿ ಸಿಎಂ ಆಗುವುದು ಖಚಿತ ಎನ್ನಲಾಗುತ್ತಿದೆ.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಮಹಾರಾಷ್ಟ್ರದಲ್ಲಿ ಸಿಎಂ ಅಭ್ಯರ್ಥಿಯ ಆಯ್ಕೆಯ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದೆ. ಈ ಮೂಲಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಆದರೆ, ಏಕನಾಥ್ ಶಿಂಧೆ ತಾವು ಸಿಎಂ ರೇಸ್ನಿಂದ ಹಿಂದೆ ಸರಿಯಲು ಬೇರೊಂದು ಬೇಡಿಕೆಯಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಸರ್ಕಾರದಲ್ಲಿ ತಮ್ಮ ಮಗ ಶ್ರೀಕಾಂತ್ ಶಿಂಧೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಏಕನಾಥ್ ಶಿಂಧೆ ಬಿಜೆಪಿ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಬಿಜೆಪಿ ಮೂಲಗಳ ಪ್ರಕಾರ, ಶಿವಸೇನೆ ಮತ್ತು ಎನ್‌ಸಿಪಿ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆಯಲಿವೆ. ಉಪಮುಖ್ಯಮಂತ್ರಿ ಪಾತ್ರವನ್ನು ಒಪ್ಪಿಕೊಳ್ಳುವ ಅಥವಾ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಆಯ್ಕೆಯನ್ನು ಏಕನಾಥ್ ಶಿಂಧೆ ಅವರಿಗೆ ನೀಡಲಾಗಿದೆ ಎನ್ನಲಾಗಿದೆ. ಹೀಗಾಗಿ, ತನ್ನ ಬದಲು ತನ್ನ ಮಗನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಏಕನಾಥ್ ಶಿಂಧೆ ಇಟ್ಟಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಸಂಪುಟ ರಚನೆಯ ಮೊದಲ ಹಂತದಲ್ಲಿ ಮುಖ್ಯಮಂತ್ರಿ, ಇಬ್ಬರು ಉಪಮುಖ್ಯಮಂತ್ರಿಗಳು ಹಾಗೂ 17ರಿಂದ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಒಂದು ತಿಂಗಳೊಳಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 2ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಹೆಚ್ಚಾಗಿದೆ.