ಹೊಸದಿಗಂತ ವರದಿ ಕಲಘಟಗಿ:
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಬಿಜೆಪಿ ಸರ್ಕಾರದ ಮೀಸಲಾತಿ ನೀತಿಯನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿರುವ ಕಾಂಗ್ರೆಸ್ ಅನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ಕೊಟ್ಟರು.
ಪಟ್ಟಣದಲ್ಲಿ ಶನಿವಾರ ನಡೆದ ರೋಡ್ ಶೋದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತಯಾಚನೆ ಮಾಡಿ ಮಾತನಾಡಿದರು.
ಬಿಜೆಪಿ ಸರಕಾರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಹೆಚ್ಚಿಸಿದೆ. ಇಂತಹ ಕ್ರಾಂತಿಕಾರಿ ಬದಲಾವಣೆಯನ್ನು ಹಿಂಪಡೆಯುತ್ತೇವೆ ಎನ್ನುತ್ತಿರುವ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ ಎಂದರು.
ರಾಜ್ಯ ಸರ್ಕಾರವು ಮುಸ್ಲಿಮರಿಗೆ ಶೇ.4 ಕೋಟಾವನ್ನು ರದ್ದುಗೊಳಿಸಿ ಅವರನ್ನು ಆರ್ಥಿಕವಾಗಿ ದುರ್ಬಲ ವಿಭಾಗ (EWS) ಕೋಟಾಕ್ಕೆ ವರ್ಗಾಯಿಸಿದೆ. ಇದರ ಮೀಸಲಾತಿಯನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮರುಹಂಚಿಕೆ ಮಾಡಿ ನ್ಯಾಯ ಒದಗಿಸಿದೆ ಎಂದರು.
ʻಕಾಂಗ್ರೆಸ್ ನವರು ತುಷ್ಟೀಕರಣದ ರಾಜಕೀಯ ಮಾಡಿದರೆ, ಮೋದಿಯವರು ವಿಕಾಸದ ರಾಜಕಾರಣ ಮಾಡುತ್ತಿದ್ದಾರೆ’ ಎಂದರು. ಅಭಿವೃದ್ಧಿ ಸಹಿಸದ ಕಾಂಗ್ರೆಸ್ ಮುಖಂಡರು ಬೇಜವಾಬ್ದಾರಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಕಿಡಿಕಾರಿದರು.
ಬಿಜೆಪಿ ಆಡಳಿತದಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು, ಅದೇ ಸರ್ಕಾರವನ್ನು ಮರುಸ್ಥಾಪಿಸುವ ಅವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.