August 17, 2026
Monday, August 17, 2026
spot_img

ಬೆಳಗಾವಿಯಲ್ಲಿ ಬಿಜೆಪಿ ಅಹೋರಾತ್ರಿ ಧರಣಿ: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ₹187 ಕೋಟಿ ಹಣ ದುರ್ಬಳಕೆ ಆರೋಪ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಹೋರಾತ್ರಿ ಧರಣಿ ಹೋರಾಟದಲ್ಲಿ ಮಾತನಾಡಿದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು, ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು. ರಾಜ್ಯದಲ್ಲಿ ಹಿಂದೆಂದೂ ಕಾಣದಷ್ಟು ಭ್ರಷ್ಟ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾತ್ರಿ ಕೂಡ ಧರಣಿ ಸ್ಥಳದಲ್ಲೇ ಉಳಿದು ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಮಾಜಿ ಶಾಸಕ ಸಂಜಯ್ ಪಾಟೀಲ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಭ್ರಷ್ಟಾಚಾರಕ್ಕೆ ಸರ್ಕಾರವೇ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು. ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಬಿಜೆಪಿ ಬೀದಿ ಹೋರಾಟದ ಜತೆಗೆ ವಿಧಾನಸಭೆಯಲ್ಲಿಯೂ ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ಮಾಜಿ ಶಾಸಕ ಅನಿಲ ಬೆನಕೆ ಮಾತನಾಡಿ, ಸಚಿವ ಬಿ. ನಾಗೇಂದ್ರ ಅವರ ಅವಧಿಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಿಗಮದ ಹಣದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿದರು. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಆರ್. ಅಶೋಕ್ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ಆರಂಭಿಸಲಾಗಿದೆ ಎಂದರು.

ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದರು.

ಇದನ್ನೂ ಓದಿ:

ಇದಲ್ಲದೆ ರಾಜ್ಯದಲ್ಲಿ ವಿವಿಧ ಕ್ಷೇತ್ರದಗಳಲ್ಲಿ ಅನುಭವಿಸುತ್ತಿರುವ ವಿಚಾರದ ಬಗ್ಗೆಯೂ ಅಸಮಾಧಾನ ಹೊರ ಹಾಕಿದರು. ಅಂಗವಿಕಲರ ಮಾಸಾಶನ, ಬರ ಪರಿಹಾರ ಹಾಗೂ ಬೆಳೆ ನಷ್ಟ ಪರಿಹಾರ ವಿತರಣೆಯಲ್ಲೂ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಈ ವೇಳೆ ಒಬಿಸಿ ಘಟಕದ ಅಧ್ಯಕ್ಷರು, ಮಹೇಶ್ ಕುಮಟಳ್ಳಿ, ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ಉಜ್ವಲಾ ಬಡವಾನಾಚೆ, ನ್ಯಾಯವಾದಿ ಎಂ. ಬಿ. ಜರಳಿ. ಕುಡಚಿ ಶಾಸಕ ಪಿ. ರಾಜೀವ. ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಗೀತಾ ಸುತಾರ, ಸೇರಿದಂತೆ ಮುಖಂಡರು, ಕಾರ್ಯಕರ್ತರು ನೂರಾರು ಜನ ಪಾಲ್ಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !