ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಂಸದರು, ಶಾಸಕರು ಸೇರಿದಂತೆ ಮುಖಂಡರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಪೋಲೀಸ್ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ. ಬಳಿಕ ಎಸಿಪಿ ನಾರಾಯಣ್ ಭರ್ಮಣಿ ಅವರ ಮನವೊಲಿಕೆ ಗೇಟ್ ಬಳಿಯೇ ಧರಣಿ ಕುಳಿತ ಧುರೀಣರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬರದಿಂದ ತತ್ತರಿಸಿರುವ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಬರೆ ಎಳೆದಿದೆ. ಕೇಂದ್ರ ಸರ್ಕಾರದ ರೈತಪರ ಯೋಜನೆಗಳನ್ನು ತಡೆಹಿಡಿದಿದೆ. ಹೀಗಾಗಿ ಸರ್ಕಾರ ರೈತ ವಿರೋಧಿ ನಿಲುವು ಅನುಸರಿಸುತ್ತಿರುವುದು ಖಂಡನೀಯ ಎಂದರು.
ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕರಾದ ಅನೀಲ ಬೆನಕೆ, ಸಂಜಯ್ ಪಾಟೀಲ, ಮಹಾಂತೇಶ ಕವಟಗಿಮಠ, ಜಿಲ್ಲಾ ವಕ್ತಾರ ಎಂ.ಬ.ಜಿರಲಿ, ಮುರುಘೇಂದ್ರ ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.