ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಭೂಮಿ ವಿವಾದ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎಂದು ಕಿಡಿ ಕಾರಿದ್ದಾರೆ. .
ವಕ್ಫ್ ವಿಚಾರದಲ್ಲಿ ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ, ಜಗದೀಶ್ ಶೆಟ್ಟರ್ ಹಾಗೂ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲೂ ನೋಟಿಸ್ ನೀಡಲಾಗಿತ್ತು. ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು ಎಂದು ಬಸವರಾಜ ಬೊಮ್ಮಾಯಿ ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ. ಇದಕ್ಕಾಗಿ ಒಂದೆಡೆ ಪ್ರಧಾನಿ ಮೋದಿ ಅವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದಿದ್ದಾರೆ.
ರಾಜ್ಯದ ಪ್ರಜ್ಞಾವಂತ ಜನರು ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.