ಹೊಸದಿಗಂತ ತುಮಕೂರು:
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ವಿಜಯೇಂದ್ರ, ಈ ಬಾರಿ ಮುಂಗಾರು ಉತ್ತಮವಾಗಿದೆ ಎಂದು ಹವಾಮಾನ ಇಲಾಖೆ ಮೂರು ತಿಂಗಳ ಮೊದಲೇ ಮುನ್ಸೂಚನೆ ನೀಡಿದ್ದು, ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ ಎಂದರು.
ರಾಜ್ಯಕ್ಕೆ ಯೂರಿಯಾ ಗೊಬ್ಬರವು 6.30 ಲಕ್ಷಟನ್ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂಥಾ ಹೆಚ್ಚಾಗಿ ಕರ್ನಾಟಕಕ್ಕೆ ನೀಡಿದೆ. ಈ ಗೊಬ್ಬರವನ್ನು ರೈತರಿಗೆ ನೀಡದೆ ದಳ್ಳಾಳಿಗಳಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಇರುವ ಕಡೆ ದಳ್ಳಾಳಿಗಳು, ಕಾಳಸಂತೆಕೋರರು ತುಂಬಿರುತ್ತಾರೆ. ಆದರೆ ರೈತರು ದುಪ್ಪಟ್ಟು ಹಣ ಕೊಟ್ಟು ಗೊಬ್ಬರ ಕೊಳ್ಳುವಂತಾಗಿದೆ ಎಂದು ಹೇಳಿದರು.
ನಂತರ ವಿಜಯೇಂದ್ರ ಅವರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ , ಶಾಸಕರ ಸುರೇಶ್ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಮಾಜಿ ಶಾಸಕರಾದ ಮಸಾಲೆ ಜಯರಾಂ, ಎಂ.ಡಿ.ಲಕ್ಷ್ಮೀನಾರಾಯಣ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಗಂಗರಾಜು, ಮಾಜಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮುಖಂಡರಾದ ಎಸ್.ಪಿ.ಚಿದಾನಂದ್, ಡಿ.ಕೃಷ್ಣಕುಮಾರ್, ಎಸ್.ಡಿ.ದಿಲೀಪ್‍ಕುಮಾರ್, ಬಿ.ಹೆಚ್.ಅನಿಲ್‍ಕುಮಾರ್, ಎಲ್.ಸಿ.ನಾಗರಾಜು, ಬಿ.ಕೆ.ಮಂಜುನಾಥ್, ಸಿ.ಭಾರತಿ, ಚಂದ್ರಶೇಖರಬಾಬು, ಹೆಚ್.ಟಿ.ಭೈರಪ್ಪ, ಭೈರಣ್ಣ, ನಂದೀಶ್, ವಿವಿಧ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.