ರಾಜ್ಯದಲ್ಲಿ ನಡೆಯುತ್ತಿರುವ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಜೈನಮುನಿಗಳ ಹತ್ಯೆ ಹಾಗೂ ಮೈಸೂರಿನ ಯುಬ್ರಿಗೇಡ್ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರುಗಳಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥನಾರಾಯಣ್, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್ ಇತರರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದು ಎರಡೇ ತಿಂಗಳಾಗಿದೆ, ಇಷ್ಟರಲ್ಲೇ ಎಷ್ಟೆಲ್ಲಾ ಅನಾಹುತ ಸಂಭವಿಸಿದೆ. ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಜೈನಮುನಿಗಳ ಹತ್ಯೆಯಾಗಿದೆ. ಆದರೆ ಈ ದಪ್ಪ ಚರ್ಮದ ಸರ್ಕಾರ ಏನೂ ಆಗದಂತೆ ಇದೆ. ನಿನ್ನೆಯಷ್ಟೇ ಐಟಿ ಕಂಪನಿಯ ಉದ್ಯೋಗಿಯೊಬ್ಬನನ್ನು ಹಾಡಹಗಲೇ ಕೊಂದಿದ್ದಾರೆ, ಕೊಲೆಗಡುಕರಿಗೆ ಸ್ವಲ್ಪವೂ ಭೀತಿ ಇಲ್ಲ, ಪೊಲೀಸರನ್ನು ಕಂಡರೆ ಭಯ ಇಲ್ಲದಂತಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪ್ರತಿಭಟನೆಯ ನಂತರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಕೊಲೆಗಡುಕರ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಸಿದ್ದಾರೆ. ನಿಷ್ಪಕ್ಷಪಾತ ತನಿಖೆ ಆಗಲಿ, ರಾಜ್ಯದಲ್ಲಿ ಆತಂಕ ಸೃಷ್ಟಿಯಾಗುವ ಸನ್ನಿವೇಶ ಎದುರಾಗಿದೆ, ಜೈನಮುನಿಗಳ ಹತ್ಯೆ ಮರುದಿನವೇ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ರಾಜ್ಯಪಾಲರಲ್ಲಿ ಮನವಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!