ನ.20 ರಂದು ಬಳ್ಳಾರಿಯಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ಸಮಾವೇಶ: ಜೆ.ಪಿ.ನಡ್ಡಾ, ಪ್ರಮುಖ ನಾಯಕರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಳ್ಳಾರಿಯಲ್ಲಿ ನವೆಂಬರ್ 20ರಂದು ಬಿಜೆಪಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ – ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಎಲ್ಲ ಎಸ್‍ಟಿ ಸಮುದಾಯದವರು ಭಾಗವಹಿಸಿ ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿ ಸಮಾವೇಶವನ್ನು ವಿಜಯೋತ್ಸವದಂತೆ ಆಚರಿಸುವರು. 68ಕ್ಕೂ ಹೆಚ್ಚು ಬುಡಕಟ್ಟು ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದರು. ರಾಜ್ಯ ಸರಕಾರವು ಮೀಸಲಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರ ಅಂಗೀಕಾರ ಲಭಿಸಿದೆ ಎಂದು ಸಂತಸ ಹಂಚಿಕೊಂಡರು.
ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯ ಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ 6 ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ ಹಾಗೂ ಪಕ್ಷದ ಪ್ರಮುಖರು, ಸಚಿವರು ಈ ಸಂಬಂಧ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಈ ಸಮಾವೇಶಕ್ಕೆ 4 ಲಕ್ಷ ಜನರು ಬರಲಿದ್ದಾರೆ. 6,200 ಬಸ್ ವ್ಯವಸ್ಥೆ ಮಾಡಲಾಗಿದೆ. 15ರಿಂದ 18 ಸಾವಿರ ಕ್ರೂಸರ್ ವಾಹನ ವ್ಯವಸ್ಥೆ ಇದೆ. ಬಳ್ಳಾರಿಯಲ್ಲಿ 24 ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮೀಸಲಾತಿಯನ್ನು ಹೆಚ್ಚಿಸಿದೆ. ಇದು ಬಿಜೆಪಿಯ ಬದ್ಧತೆಗೆ ಸ್ಪಷ್ಟ ನಿದರ್ಶನ. ಇದು ಈ ವರ್ಗಗಳಿಗೆ ನವಶಕ್ತಿಯನ್ನು ತುಂಬಿದೆ ಎಂದು ಅವರು ಹೇಳಿದರು.
ಸುಮಾರು 6 ದಶಕ ಆಳ್ವಿಕೆ ನಡೆಸಿದ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳು ಮೀಸಲಾತಿ ಸಂಬಂಧ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಆಕ್ಷೇಪಿಸಿದರು. ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅವಕಾಶವಿದ್ದರೂ ಅದನ್ನು ಮಾಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದೆ. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ನುಡಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನರಸಿಂಹ ನಾಯ್ಕ ಮತ್ತು ಮಂಜುನಾಥ್ ಓಲೆಕಾರ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!