August 19, 2026
Wednesday, August 19, 2026
spot_img

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಕಾರವಾರದಲ್ಲಿ ಮುಂದುವರಿದ ಧರಣಿ

ಹೊಸದಿಗಂತ ವರದಿ ಕಾರವಾರ:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಸರಣಿ ಧರಣಿ ಮುಂದುವರಿದಿದೆ.

ಬುಧವಾರ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ, ಮಾಜಿ ಸಚಿವ ಹರತಾಳ ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅವರು ಸಚಿವ ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ತೆಲಂಗಾಣ ರಾಜ್ಯಕ್ಕೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಚರಿತ್ರೆ ಬರೆದ ವಾಲ್ಮೀಕಿ ಮಹರ್ಷಿ ಅವರ ಹೆಸರಿನಲ್ಲಿ ಸ್ಥಾಪನೆಯಾದ ನಿಗಮದಲ್ಲಿ ಇಷ್ಟೊಂದು ದೊಡ್ಡ ಹಗರಣ ನಡೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಈ ಹಿಂದೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರನ್ನು ರಕ್ಷಿಸುತ್ತಿದೆ ಎಂದು ರೂಪಾಲಿ ಎಸ್. ನಾಯ್ಕ ಆರೋಪಿಸಿದರು. ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಮಾಜಿ ಸಚಿವ ಸಾಗರದ ಹರತಾಳ ಹಾಲಪ್ಪ ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಸೇರಿದಂತೆ ಪಕ್ಷದ ಮುಖಂಡರು ಧರಣಿಯಲ್ಲಿ ಭಾಗವಹಿಸಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿದರು.

ಧರಣಿಯಲ್ಲಿ ಓಬಿಸಿ ಮೋರ್ಚಾದ ರಾಜೇಂದ್ರ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್, ಪ್ರಭಾರಿಗಳಾದ ಗಜಾನನ ಗುನಗಾ, ರಾಜು ಭಂಡಾರಿ, ವಕ್ತಾರ ಜಗದೀಶ್ ನಾಯಕ ಮೊಗಟಾ, ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ಅಂಕೋಲ ಮಂಡಳದ ಸಂಜಯ ನಾಯ್ಕ್, ಮಾಧ್ಯಮ ಸಹ ಸಂಚಾಲಕ ಕಿಶನ ಕಾಂಬಳೆ ಹಾಗೂ ರಾಜ್ಯ ಪ್ರಕೋಷ್ಟದ ಸುನಿಲ್ ಸೋನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !