ಹೊಸದಿಗಂತ ವರದಿ,ಕಾರವಾರ:
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಏಪ್ರಿಲ್ 11 ರಂದು ಯಲ್ಲಾಪುರದಲ್ಲಿ ಬೃಹತ್ ಜನಾಕ್ರೋಶ ಯಾತ್ರೆ ನಡೆಯಲಿದೆ. ಪಕ್ಷದ ನಾಯಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತರುವಾಯ ಜನಸಾಮಾನ್ಯರ ಬದುಕು ದುರ್ಬರವಾಗಿದೆ. ಪ್ರತಿಯೊಂದು ವಸ್ತುಗಳೂ ದುಬಾರಿಯಾಗಿವೆ. ಭ್ರಷ್ಟ ಕಾಂಗ್ರೆಸ್ ರಾಜ್ಯ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ತುಷ್ಠೀಕರಣ ಹಾಗೂ ದಲಿತರ ಹಣ ಲೂಟಿ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ. ರಾಜ್ಯದ ತಂಡದ ಪ್ರಮುಖರು, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧ್ಯಕ್ಷರಾದ ಎನ್.ಎಸ್. ಹೆಗಡೆ, ಶಾಸಕರು, ವಿಧಾನ ಪರಿಷತ್ ಶಾಸಕರುಗಳು, ಮಾಜಿ ಶಾಸಕರುಗಳು, ವಿವಿಧ ಹಂತದ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ 10.30ಕ್ಕೆ ಪೂಜೆ ಸಲ್ಲಿಸಿ, ಅಲ್ಲಿಂದ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಮೂಲಕವಾಗಿ ತೆರಳಿ ವೈ.ಟಿ.ಎಸ್.ಎಸ್ ಕಾಲೇಜು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಬಿಜೆಪಿಯ ಜನಪರವಾದ ಈ ಬೃಹತ್ ಹೋರಾಟದಲ್ಲಿ ನಮ್ಮೆಲ್ಲ ಕಾರ್ಯಕರ್ತರು, ಹಿತೈಷಿಗಳು ಹಾಗೂ ಎಲ್ಲಾ ಹಂತದ ಜನಪ್ರತಿನಿಧಿಗಳು, ಸರ್ಕಾರದ ಬೆಲೆ ಏರಿಕೆಯಿಂದ ಸಮಸ್ಯೆಗೊಳಗಾದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ರೂಪಾಲಿ ಎಸ್.ನಾಯ್ಕ ವಿನಂತಿಸಿದ್ದಾರೆ.