ಮೋದಿ ವಿರುದ್ಧ ಪಾಕ್ ಸಚಿವರ ಅವಹೇಳನಕಾರಿ ಹೇಳಿಕೆ: ಇಂದು ದೇಶಾದ್ಯಂತ ಬಿಜೆಪಿ ಪ್ರತಿಭಟನೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ. ದೇಶದ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಪಾಕಿಸ್ತಾನದ ಜೊತೆಗೆ ಪಾಕಿಸ್ತಾನದ ವಿದೇಶಾಂಗ ಸಚಿವರ ಪ್ರತಿಕೃತಿಯನ್ನು ಬಿಜೆಪಿ ಕಾರ್ಯಕರ್ತರು ದಹಿಸುತ್ತಾರೆ. ಪಾಕಿಸ್ತಾನದ ವಿದೇಶಾಂಗ ಸಚಿವರ ನಾಚಿಕೆಯಿಲ್ಲದ ಹೇಳಿಕೆಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿಕೆ ನೀಡಿದೆ.

ಪಾಕಿಸ್ತಾನದ ಆರ್ಥಿಕತೆ ಕುಸಿಯುತ್ತಿರುವ ರೀತಿ, ಅನ್ಯಾಯ, ಅರಾಜಕತೆ ಮತ್ತು ಪಾಕ್ ಸೇನೆಯಲ್ಲಿನ ಪ್ರತಿಕೂಲ ಪರಿಸ್ಥಿತಿಗಳಿಂದ ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನದ ವಿದೇಶಾಂಗ ಸಚಿವರು ಭಾರತದ ಪ್ರಧಾನಿ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಒಂದೆಡೆ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಇಡೀ ವಿಶ್ವದಲ್ಲಿ ಭಾರತಕ್ಕೆ ಒಳ್ಳೆಯ ಹೆಸರು ಬರುತ್ತಿದ್ದು, ಭಾರತದ ವಿದೇಶಾಂಗ ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮತ್ತೊಂದೆಡೆ, ಪಾಕಿಸ್ತಾನವು ತನ್ನ ನಡವಳಿಕೆಯಿಂದ ಟೀಕೆಗೆ ಒಳಗಾಗುತ್ತಿದೆ. ಭಾರತದ ಪ್ರಧಾನಿ ಮೋದಿಯನ್ನು ಟೀಕಿಸುವ ಮಟ್ಟ ಬಿಲಾವರ್ ಭುಟ್ಟೋಗೆ ಇದೆಯೇ?. ನಿನ್ನೆಯೂ ನವದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಗೊತ್ತೇ ಇದೆ. ಬಿಲಾವರ್ ಭುಟ್ಟೊ ಕ್ಷಮೆಯಾಚಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ‌

ಬಿಲಾವಲ್‌ ಹೇಳಿದ್ದೇನು? 

ನ್ಯೂಯಾರ್ಕ್‌ನ ಬುಧವಾರ ಮತ್ತು ಗುರುವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ನಿಮ್ಮ ದೇಶ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ತೀವ್ರ ಮುಜುಗರ ಅನುಭವಿಸಿದ್ದ ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ, ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂದು ನಾಲಿಗೆ ಹರಿಬಿಟ್ಟಿದ್ದು, ದೇಶದೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!