ಕಾಂಗ್ರೆಸ್‌ನ ಜನವಿರೋಧಿ ನೀತಿ‌ ವಿರುದ್ಧ ಬೀದಿಗಿಳಿದ ಬಿಜೆಪಿ

ಹೊಸದಿಗಂತ ವರದಿ ಮಡಿಕೇರಿ:

ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಿಂದು ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಜನರ ಅಭಿವ್ಯಕ್ತಿ ಹಾಗೂ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ನುಣುಚಿಕೊಳ್ಳುವ ಪ್ರಯತ್ನ: ಎಲ್ಲಾ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಎಂದು ಹೇಳಿ ಇದೀಗ ಕೆಂಪು ಬಸ್‍ಗಳಲ್ಲಿ ಮಾತ್ರ ಅವಕಾಶ ಎಂದು ಹೇಳಲಾಗುತ್ತಿದೆ. ಐದು ಗ್ಯಾರಂಟಿ ಆಧಾರದಲ್ಲಿ ಮತವನ್ನು ಪಡೆದು ಅಧಿಕಾರಕ್ಕೆ ಬಂದ ನಂತರ ನುಣಿಚಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

200 ಯೂನಿಟ್ ವಿದ್ಯುತ್‍ನ್ನು ಉಚಿತ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ ಇದೀಗ ಹಲವಾರು ನಿರ್ಬಂಧಗಳನ್ನು ವಿಧಿಸಿದೆ. ಅಲ್ಲದೆ ಯಾರಿಗೂ ತಿಳಿಸದೇ ಏಕಾಏಕಿ ವಿದ್ಯುತ್ ದರವನ್ನು ಯೂನಿಟ್‍ಗೆ 70 ಪೈಸೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸ ಮಾಡಿರುವುದು ಖಂಡನೀಯ ಎಂದ ರಾಬಿನ್ ದೇವಯ್ಯ, ಚುನಾವಣೆ ಸಂದರ್ಭ ನೀಡಿದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಯಥಾವತ್ತಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಗೋಹಂತಕರಿಗೆ ಬೆಂಬಲ:

ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಇದನ್ನು ವಾಪಸ್ಸು ಪಡೆಯುತ್ತೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ಹಂತಕರಿಗೆ ಬೆಂಬಲವನ್ನು ಸೂಚಿಸುತ್ತಿದೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!