ಹೊಸದಿಗಂತ ತುಮಕೂರು:
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿ ಕೊಳ್ಳಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು. ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು.