Sunday, October 1, 2023

Latest Posts

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿಯಿಂದ ನಾಳೆ ಪ್ರವಾಸ ಆರಂಭ: ಎನ್.ರವಿಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಾಗೂ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಖಂಡಿಸಿ ರೈತ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯಾದ್ಯಂತ ಪ್ರವಾಸದ ಪ್ರಾರಂಭದ ಹಿನ್ನೆಲೆಯಲ್ಲಿ ಸೆ .17 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ಕೋಲಾರದ ಮುಳುಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ತಂಡವು ಈ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆಎಂದು ಅವರು ತಿಳಿಸಿದ್ದಾರೆ. ಮಹಾಪೂಜೆಯ ಬಳಿಕ ಬೆಳಿಗ್ಗೆ 11.00 ಗಂಟೆಗೆ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.

ಈ ಕಾರ್ಯಕ್ರಮಗಳಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಕರ್ನಾಟಕದಲ್ಲಿ ಮಳೆಯ ಕೊರತೆಯಿಂದ ಬರ ತೀವ್ರವಾಗಿದೆ. ವಿದ್ಯುತ್ ಕೊರತೆ ರಾಜ್ಯವನ್ನು ಮತ್ತು ರಾಜ್ಯದ ರೈತರನ್ನು ಕಾಡುತ್ತಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗುವಂತಾಗಿದೆ ಎಂದು ಎನ್.ರವಿಕುಮಾರ್ ಅವರು ಗಮನ ಸೆಳೆದಿದ್ದಾರೆ. ಈ ಎಲ್ಲ ವಿಚಾರಗಳನ್ನು ಜನರಿಗೆ ತಿಳಿಸಿ ಜಾಗೃತಿ ಮೂಡಿಸಲು ಪ್ರವಾಸ ನಡೆಯಲಿದೆ ಎಂದು ವಿವರಿಸಿದ್ದಾರೆ.

ಸರಕಾರವು ಕಾವೇರಿ ನೀರಿನ ವಿಚಾರವನ್ನು ನಿಭಾಯಿಸುವಲ್ಲಿ ವಿಫಲತೆ ಅನುಭವಿಸಿದೆ. ಐಎನ್‍ಡಿಐಎ ಒಕ್ಕೂಟವನ್ನು ಸಂತುಷ್ಟಿಪಡಿಸಲು ಅದು ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿದೆ. ರಾಜ್ಯದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಮಿತಿ ಮೀರಿದೆ. ಈ ಎಲ್ಲ ವೈಫಲ್ಯಗಳನ್ನು ಖಂಡಿಸಿ ಪಕ್ಷದ ಹಿರಿಯರಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರವಾಸ ನಡೆಯಲಿದೆ. ನಳಿನ್‍ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಮತ್ತು ಇತರ ಮುಖಂಡರು ಭಾಗವಹಿಸಲಿದ್ದಾರೆ. ಪ್ರವಾಸದ ದಿನಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!