ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವಸ್ಥಾನದಿಂದ ಬರುವ ತನ್ನ ಪತ್ನಿಗಾಗಿ ಎಸ್‌ಯುವಿಯಲ್ಲಿ ಕಾಯುತ್ತಿದ್ದ ಸ್ಥಳೀಯ ಬಿಜೆಪಿ ಕಾರ್ಯಕರ್ತನನ್ನು ಸೋಮವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಗುಜರಾತ್‌ನ ವಲ್ಸಾದ್ ಜಿಲ್ಲೆಯ ವಾಪಿ ಪಟ್ಟಣದಲ್ಲಿ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಕೊಚರ್ವಾ ಗ್ರಾಮದ ಶೈಲೇಶ್ ಪಟೇಲ್ ಅವರ ಕಾರಿನ ಬಳಿ ಬಂದು ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಡುಂಗರಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷ ಶೈಲೇಶ್ ಪಟೇಲ್ ತನ್ನ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ಶೈಲೇಶ್ ಪಟೇಲ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸಹಾಯಕ್ಕಾಗಿ ಕರೆದಿದ್ದಾರೆ. ಶೈಲೇಶ್ ಪಟೇಲ್ ಅವರನ್ನು ವಾಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶೈಲೇಶ್ ಪಟೇಲ್ ನಿಧನಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದರು. ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲವು ರಸ್ತೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ದುಷ್ಕರ್ಮಿಗಳ ಬೇಟೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.