July 8, 2026
Wednesday, July 8, 2026
spot_img

ರಾಜ್ಯ ಸರಕಾರದ ದ್ವೇಷ ಭಾಷಣ ಮಸೂದೆಗೆ ತಡೆ: ಯಾವುದೇ ಹೊಸ ಕಾನೂನಿನ ಅಗತ್ಯವಿಲ್ಲ ಎಂದ ಕೇಂದ್ರ ಗೃಹ ಸಚಿವಾಲಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದ್ದು, ಸದ್ಯಕ್ಕೆ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಈ ಸಮಸ್ಯೆಯನ್ನು ಪರಿಹರಿಸಲು ಸಮರ್ಪಕವಾಗಿದೆ. ಹೀಗಾಗಿ ಹೊಸ ಕಾನೂನು ಅಗತ್ಯವಿಲ್ಲ ಎಂದು ತಿಳಿಸಿದೆ.

ಪ್ರತ್ಯೇಕ ಕಾನೂನು ಬೇಡ

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಗೃಹ ಸಚಿವಾಲಯದ ಕಾನೂನು ವಿಭಾಗದಲ್ಲಿ ಪರಿಶೀಲನೆ ನಡೆಸಲಾಗಿದೆ. ಮಸೂದೆಯಲ್ಲಿ ಪರಿಹರಿಸಲು ಯತ್ನಿಸಿರುವ ಅಂಶಗಳು ಈಗಾಗಲೇ ಭಾರತೀಯ ನ್ಯಾಯ ಸಂಹಿತಾ, 2023 ಮತ್ತು ಇತರ ಚಾಲ್ತಿಯಲ್ಲಿರುವ ಕಾನೂನುಗಳ ಅಡಿಯಲ್ಲಿ ಸೇರಿಕೊಂಡಿವೆ. ಹೀಗಿರುವಾಗ ರಾಜ್ಯ ಸರ್ಕಾರವು ಪ್ರತ್ಯೇಕ ಕಾನೂನು ಜಾರಿಗೆ ತರುವುದರಿಂದ ಮೂಲ ದಾಖಲೆ ಮತ್ತು ಏಕರೂಪತೆಯ ಕೊರತೆ ಉಂಟಾಗಬಹುದು .ಪ್ರಸುತ್ತ ಈ ಹಂತದಲ್ಲಿ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಸಮಸ್ಯೆಗಳನ್ನು ಪರಿಹರಿಸಲು ಸಾಕಾಗುತ್ತದೆ ಎಂದು ತಿಳಿಸಿದೆ.

ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ರಾಜ್ಯ ಸರಕಾರ

2025ರ ಡಿಸೆಂಬರ್‌ನಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿ(ಎಸ್)ನ ತೀವ್ರ ವಿರೋಧದ ಹೊರತಾಗಿಯೂ, ಈ ಮಸೂದೆಯನ್ನು ತ್ವರಿತವಾಗಿ ಅಂಗೀಕರಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ ಅನುಮೋದನೆ ನೀಡಲು ನಿರಾಕರಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಗಾಗಿ ಮಸೂದೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಈ ಮಸೂದೆ ಪ್ರಕಾರ, ದ್ವೇಷ ಅಪರಾಧ ಅಥವಾ ದ್ವೇಷ ಭಾಷಣ ಮಾಡಿದರೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸುವ ಅವಕಾಶವಿತ್ತು. ಮರು ಅಪರಾಧಕ್ಕೆ ಏಳು ವರ್ಷಗಳವರೆಗೆ ಶಿಕ್ಷೆ ಮತ್ತು 1 ಲಕ್ಷದ ವರೆಗೆ ದಂಡ ವಿಧಿಸುವ ಬಗ್ಗೆಯೂ ಮಸೂದೆಯಲ್ಲಿ ಸೇರಿಸಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !