ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ನೋಯ್ಡಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಡಬ್ಲ್ಯೂ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಬಾಲಕಿ ತಂದೆ ಹಾಗೂ ಮಾವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನೋಯ್ಡಾ ಸೆಕ್ಟರ್ 20 ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಸದರ್ಪುರದ ನಿವಾಸಿಗಳಾದ ಗುಲ್ ಮೊಹಮ್ಮದ್ ಮತ್ತು ಅವರ ಸೋದರ ಮಾವ ರಾಜ ಗಾಯಗೊಂಡಿದ್ದಾರೆ. ಮಗಳು ಆಯತ್ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಸೆಕ್ಟರ್ 30ರಲ್ಲಿರುವ ಮಕ್ಕಳ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಆಯತ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.
ಘಟನೆಯ ನಂತರ ಪೊಲೀಸರು ಬಿಎಂಡಬ್ಲ್ಯೂ ಕಾರನ್ನು ವಶಪಡಿಸಿಕೊಂಡಿದ್ದು, ಕಾರಿನ ಚಾಲಕ ಹಾಗೂ ಜೊತೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.