ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಿದ ಪೊಲೀಸರು ಮುಂಬೈನ ಬಾಂದ್ರಾ ನಿವಾಸಿಯನ್ನು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ಟ್ರಾಫಿಕ್ ಪೊಲೀಸರಿಗೆ ಮಂಗಳವಾರ ಅನಾಮಧೇಯ ಸಂದೇಶವೊಂದು ಬಂದಿದ್ದು, ಅದರಲ್ಲಿ 58 ವರ್ಷದ ನಟ 2 ಕೋಟಿ ರೂಪಾಯಿ ಪಾವತಿಸದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಈ ಸಂಬಂಧ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಮತ್ತು 2 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಾಂದ್ರಾ(ಪೂರ್ವ) ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.