November 9, 2026
Monday, November 9, 2026
spot_img

ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತೀವ್ರ ಶೋಧ

ಹೊಸದಿಗಂತ ವರದಿ ಬೆಳಗಾವಿ:

ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಅಪರಿಚಿತ ವ್ಯಕ್ತಿಗಳು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದು, ಪಾಲಿಕೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇ-ಮೇಲ್ ಮೂಲಕ ಬಂದ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಪಾಲಿಕೆ ಕಚೇರಿಯ ವಿವಿಧ ವಿಭಾಗಗಳು, ಕೊಠಡಿಗಳು ಹಾಗೂ ಆವರಣದಲ್ಲಿ ತೀವ್ರ ತಪಾಸಣೆ ಕೈಗೊಂಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಕಚೇರಿಯ ಭದ್ರತಾ ವ್ಯವಸ್ಥೆಯನ್ನೂ ಪರಿಶೀಲಿಸಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾಲಿಮಿರ್ಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆದರಿಕೆ ಸಂದೇಶವನ್ನು ಯಾರು ಕಳುಹಿಸಿದ್ದಾರೆ, ಇದರ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಳ್ಳುವ ಸಾಧ್ಯತೆಯಿದೆ. ಸದ್ಯ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂದ ಶೋಧ ಕಾರ್ಯ ಮುಂದುವರಿದಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಸಾರ್ವಜನಿಕರ ದೈನಂದಿನ ಕೆಲಸ ಕಾರ್ಯಗಳು ನಡೆಯುವ ಮಹಾನಗರ ಪಾಲಿಕೆ ಕಚೇರಿಗೇ ಬಾಂಬ್ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Must Read

Skip to toolbar