November 24, 2026
Tuesday, November 24, 2026
spot_img

ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಮಕ್ಕಳನ್ನು ಕರೆತರದಂತೆ ಇ-ಮೇಲ್‌ನಲ್ಲಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ನವೆಂಬರ್ 29ರಂದು ಬೆಂಗಳೂರಿನ ಮಾದಾವರದ NICE ಮೈದಾನದಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ಅಪರಿಚಿತರು ಐಇಡಿ (IED) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ನವೆಂಬರ್ 9ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ರವಾನೆಯಾಗಿತ್ತು. ನವೆಂಬರ್ 29ರಂದು ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯುವ ವೇಳೆ ಐಇಡಿ ಸ್ಫೋಟ ಸಂಭವಿಸಲಿದೆ ಎಂದು ಇ-ಮೇಲ್‌ನಲ್ಲಿ ಎಚ್ಚರಿಸಲಾಗಿತ್ತು.

ಇದನ್ನೂ ಓದಿ:

ಅಷ್ಟೇ ಅಲ್ಲದೆ, ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರದಂತೆ, ಎಲ್ಲಿಯಾದರೂ ಬಿದ್ದಿರುವ ಐಫೋನ್‌ಗಳನ್ನು ಮುಟ್ಟದಂತೆ ಹಾಗೂ ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ಸಂದೇಶದಲ್ಲಿ ಸೂಚಿಸಲಾಗಿತ್ತು. ಕೊನೆಯಲ್ಲಿ ‘ಖಲಿಸ್ತಾನ್ ಜಿಂದಾಬಾದ್’ ಎಂಬ ಘೋಷವಾಕ್ಯವನ್ನೂ ಬರೆಯಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಯಕ್ರಮದ ಆಯೋಜಕರಿಂದ ಮಾಹಿತಿ ಸಂಗ್ರಹ

ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ (BIEC) ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ನವೆಂಬರ್ 29ರಂದು ಮಾದಾವರದ NICE ಮೈದಾನದಲ್ಲಿ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಿಗದಿಯಾಗಿರುವುದು ದೃಢಪಟ್ಟಿದೆ.

ಈ ಸಂಬಂಧ ಉತ್ತರ ವಿಭಾಗದ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(4) ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇ-ಮೇಲ್ ಮೂಲ ಪತ್ತೆಗೆ ತನಿಖೆ

ಬೆದರಿಕೆ ಸಂದೇಶ ಕಳುಹಿಸಿರುವ ಇ-ಮೇಲ್ ಖಾತೆಯ ಮೂಲ ಮತ್ತು ಐಪಿ ವಿಳಾಸವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಂದೇಶದ ಹಿಂದಿರುವ ವ್ಯಕ್ತಿಗಳು ಯಾರು ಮತ್ತು ಬೆದರಿಕೆಯ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚುವ ಪ್ರಯತ್ನ ಮುಂದುವರಿದಿದೆ.

Must Read