ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ಎಸ್‍ಐಟಿ ರಚಿಸಲು ಬೊಮ್ಮಾಯಿ ಆಗ್ರಹ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು.

3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ ಎಂದು ಆಕ್ಷೇಪಿಸಿದರು.

ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ.

ಪೊಲೀಸರು ಮೊಂಡುವಾದವನ್ನೇ ಮಾಡುತ್ತಿದ್ದರು. ವೈದ್ಯಕೀಯ ಪರೀಕ್ಷೆಗಾಗಿ ನಾನು ಒತ್ತಾಯಿಸಿದೆ. ಇವರು ಯಾರನ್ನು ರಕ್ಷಿಸಲು ಹೊರಟಿದ್ದರು? ಬೇರೆ ಕೋಮಿಗೊಂದು ನೀತಿ ಇದೆಯೇ? ಇದರ ಹಿಂದೆ ಯಾರ ಚಿತಾವಣೆ ಇದೆ? ಒತ್ತಡ ಯಾರದ್ದು ಎಂದು ಕೇಳಿದರು. ಅಲ್ಪಸಂಖ್ಯಾತ ಹೆಣ್ಮಗಳ ಮೇಲೆ ಅತ್ಯಾಚಾರ ಆಗಿದ್ದರೂ ಗೃಹ ಸಚಿವರು ಸಮರ್ಪಕ ಕ್ರಮಕ್ಕೆ ಮುಂದಾಗಿಲ್ಲ. ಪ್ರಭಾವಿಗಳ ಬಗ್ಗೆ ಇವರ ಕಾಳಜಿ ಇದೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಇಂಥ ವಿಚಾರದಲ್ಲಿ ಯಾಕೆ ಮಾತನಾಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!