ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸುತ್ತಿದೆ. ತಮಿಳು ಸೂಪರ್ ಸ್ಟಾರ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಬೆಂಬಲ ಘೋಷಿಸುವ ಮೂಲಕ ಹೊಸ ಸರ್ಕಾರ ರಚನೆಯ ಹಾದಿಯನ್ನು ಸುಗಮಗೊಳಿಸಿದೆ.

ಚೆನ್ನೈನ ಪನೈಯೂರ್‌ನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖಂಡರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ವಿಜಯ್ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ಸ್ಥಿರ ಮತ್ತು ಜಾತ್ಯತೀತ ಸರ್ಕಾರವನ್ನು ರಚಿಸುವ ನಿಟ್ಟಿನಲ್ಲಿ ಈ ಎರಡು ಪಕ್ಷಗಳು ಒಮ್ಮತಕ್ಕೆ ಬಂದಿವೆ.
ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಬಹುಮತಕ್ಕೆ 10 ಸ್ಥಾನಗಳ ಕೊರತೆಯಿತ್ತು. ಈಗ ಕಾಂಗ್ರೆಸ್ ತನ್ನ 5 ಶಾಸಕರ ಬೆಂಬಲವನ್ನು ಘೋಷಿಸಿದ್ದು, ಇತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.



