September 27, 2026
Sunday, September 27, 2026
spot_img

ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪದವಿ, ಪದವಿಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜುಲೈ 3ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಕ್ಕಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಶಿಫಾರಸಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಸೂಚನೆಗಳ ಪ್ರಕಾರ, ನದಿ, ಹೊಳೆ ಹಾಗೂ ಸಮುದ್ರ ತೀರದ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಅಲ್ಲದೆ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ತೊರೆಯದಂತೆ ಸೂಚನೆ ನೀಡಲಾಗಿದ್ದು, ತುರ್ತು ಪರಿಸ್ಥಿತಿ ಎದುರಾದಲ್ಲಿ ಕೂಡಲೇ ಸ್ಪಂದಿಸಲು ಸಜ್ಜಾಗಿರುವಂತೆ ನಿರ್ದೇಶಿಸಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ, ಸಮುದ್ರತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ.

Must Read