ಕಾಳಿ ನದಿಯಿಂದ ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ನೀರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಖಾರ್‌ಲ್ಯಾಂಡ್ ಯೋಜನೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್‌ಲ್ಯಾಂಡ್ ಯೋಜನೆಯಡಿ 1,500 ಕೋಟಿ ರೂ.ಗಳ ಅಂದಾಜು ಮೊತ್ತದ ಮಾಸ್ಟರ್ ಪ್ಲಾನ್‌ಗೆ ಒಪ್ಪಿಗೆ ನೀಡಿದೆ. ಸದರಿ ಯೋಜನೆಯಡಿ ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟೆ ನಿರ್ಮಿಸಿ ಸಮುದ್ರಕ್ಕೆ ಸೇರುವ ನೀರನ್ನು ತಡೆದು ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಉಪಯೋಗಿಸಲು ಉದ್ದೇಶಿಸಿರುವ ಪಶ್ಚಿಮ ವಾಹಿನಿ ಯೋಜನೆಯಡಿ ಮೊದಲನೇ ಹಂತದ ಕಾಮಗಾರಿಗಳನ್ನು 500 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ.
ರಾಜ್ಯದಲ್ಲಿ ನೀರಾವರಿ ಪ್ರದೇಶವನ್ನು ಹೆಚ್ಚಿಸಲು ರಾಜ್ಯ ಸರಕಾರವು 2021-22ನೇ ಸಾಲಿನಲ್ಲಿ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳನ್ನು ಅನುಮೋದಿಸಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಪ್ರವೃತ್ತವಾಗಿದೆ. ನೀರಿನ ಲಭ್ಯತೆಗನುಗುಣವಾಗಿ ಹೊಸ ಯೋಜನೆಗಳಿಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!