ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಲೋಕಸಭೆ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.
ಲೋಕಸಭೆ ದಿನದ ಸಭೆ ಸೇರಿದ ತಕ್ಷಣ, ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ ವಿಚಾರ ಪ್ರಸ್ತಾಪವಾಯಿತು. ಈ ವೇಳೆ ಆಡಳಿತಾರೂಢ ಪಕ್ಷದ ಸದಸ್ಯರಿಂದ “ಸೋನಿಯಾ ಗಾಂಧಿ ಮಾಫಿ ಮಾಂಗೊ” ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಇದೇ ವೇಳೆ ವಿರೋಧ ಪಕ್ಷಗಳ ಸದಸ್ಯರು ಕೂಡ ಘೋಷಣೆ ಕೂಗಲು ಆರಂಭಿಸಿದರು.
ತೀವ್ರ ಗದ್ದಲ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಮತ್ತೆ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದ ಸೋನಿಯಾ ಗಾಂಧಿಯವರು, ವಕ್ಫ್ ತಿದ್ದುಪಡಿ ಮಸೂದೆ ದೇಶದ ಸಂವಿಧಾನದ ಮೇಲಿನ ‘ನಿರ್ಲಜ್ಜ ದಾಳಿ’ ಎಂದು ಟೀಕಿಸಿದ್ದರು.
ಇದು ಸಮಾಜವನ್ನು ಶಾಶ್ವತವಾಗಿ ಧ್ರುವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ ಹೆಣೆದ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಕೂಡ ಸಂವಿಧಾನದ ಮೇಲಿನ ಮತ್ತೊಂದು ವಿಧ್ವಂಸಕ ದಾಳಿ. ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿಗಳಿಗೆ ಸೇರಿದ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಯೊಂದಿಗೆ ಸಂಸತ್ತು ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನವನ್ನು ಸರ್ಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದರು.