September 10, 2026
Thursday, September 10, 2026
spot_img

ಗಾಂಧಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿದ್ದ 15 ಜನ ಕಾರ್ಮಿಕರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಜರಾತ್‌ನ ಗಾಂಧಿನಗರದ ಕುಡಾಸನ್ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ  ದುರಂತವೊಂದು ಸಂಭವಿಸಿದೆ. ಇಲ್ಲಿನ ‘ಬೋಸ್ಕಿ ದಿ ಎಂಪೈರ್’ ಹೆಸರಿನ ನಿರ್ಮಾಣ ಹಂತದ ವಾಣಿಜ್ಯ ಮಾಲ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಒಂದು ದಿಢೀರನೆ ಕುಸಿದು ಬಿದ್ದಿದ್ದು, ಕೆಲಸ ಮಾಡುತ್ತಿದ್ದ ಸುಮಾರು 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಡಳಿತ, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುವ ಮೂಲಕ ಎಲ್ಲರನ್ನೂ ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ತ್ವರಿತ ರಕ್ಷಣಾ ಕಾರ್ಯಾಚರಣೆ


ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಗಾಂಧಿನಗರ ಮತ್ತು ಅಹಮದಾಬಾದ್‌ನ ಅಗ್ನಿಶಾಮಕ ದಳದ ಸಿಬ್ಬಂದಿ ಯಂತ್ರೋಪಕರಣಗಳೊಂದಿಗೆ ಕಾರ್ಯಾಚರಣೆಗೆ ಇಳಿದರು. ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಹ ಆಗಮಿಸಿ ಪ್ಲಾಸ್ಮಾ ಕಟರ್ ಹಾಗೂ ಗ್ಯಾಸ್ ಕಟರ್‌ಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಿದವು. ಅವಶೇಷಗಳ ಅಡಿಯಲ್ಲಿದ್ದ ಒಟ್ಟು 15 ಜನರನ್ನು ಯಶಸ್ವಿಯಾಗಿ ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಯಿತು.

ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರು

ಗಾಯಗೊಂಡವರಲ್ಲಿ ಮೂವರು ಕಾರ್ಮಿಕರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದ್ದು, ಉಳಿದ 12 ಜನರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಐಸಿಯುಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:

ಸ್ಥಳಕ್ಕೆ ಭೇಟಿ ನೀಡಿದ ಸಚಿವರು

ದುರಂತದ ಹಿನ್ನೆಲೆಯಲ್ಲಿ ಗುಜರಾತ್ ಉಪಮುಖ್ಯಮಂತ್ರಿ ಹರ್ಷ್ ಸಂಘವಿ, ಆರೋಗ್ಯ ಸಚಿವ ಪ್ರಫುಲ್ ಪನ್ಶೇರಿಯಾ ಮತ್ತು ಶಾಸಕ ಅಲ್ಪೇಶ್ ಠಾಕೂರ್ ಸೇರಿದಂತೆ ಹಿರಿಯ ಅಧಿಕಾರಿಗಳು ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿಗಳ ಸೂಚನೆಯಂತೆ ರಕ್ಷಣಾ ಕಾರ್ಯ ಮುಗಿಯುವವರೆಗೂ ಅವಶೇಷಗಳ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹರ್ಷ್ ಸಂಘವಿ ತಿಳಿಸಿದ್ದಾರೆ.

ಸ್ಥಳದಲ್ಲಿ ಇನ್ನು ಯಾರೂ ಸಿಲುಕಿಕೊಂಡಿಲ್ಲ ಎಂದು ಸೈಟ್ ಮ್ಯಾನೇಜರ್ ಸ್ಪಷ್ಟಪಡಿಸಿದ್ದರೂ, ಸಂಪೂರ್ಣ ಅವಶೇಷ ತೆರವಾಗುವವರೆಗೂ ತಪಾಸಣೆ ಮುಂದುವರಿಯಲಿದೆ. ಇನ್ನು ಮಹಾನಗರ ಪಾಲಿಕೆಯ ತಾಂತ್ರಿಕ ತಂಡವು ಘಟನೆಗೆ ಸಂಬಂಧಿಸಿದಂತೆ ವಿವರವಾದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಗಾಂಧಿನಗರ ಜಿಲ್ಲಾಧಿಕಾರಿ ರವೀಂದ್ರ ಖಾತಲೆ ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !