ಬುಮ್ರಾ ಮಾರಕ ದಾಳಿಗೆ ಎಡವಿದ ಇಂಗ್ಲೆಂಡ್: ಮೊದಲ ಇನಿಂಗ್ಸ್‌ನಲ್ಲಿ 253 ರನ್‌ಗಳಿಗೆ ಸರ್ವಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ಇಂಗ್ಲೆಂಡ್ ತಂಡ ತತ್ತರಿಸಿದ್ದು, ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೇವಲ 253 ರನ್‌ಗಳಿಗೆ ಸರ್ವಪತನ ಕಂಡಿದೆ.

ಟೀಂ ಇಂಡಿಯಾ ಬರೋಬ್ಬರಿ 143 ರನ್‌ಗಳ ಮುನ್ನಡೆ ಪಡೆದಿದೆ. ಜಸ್ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿ ಟೀಂ ಇಂಡಿಯಾ ಮುನ್ನಡೆ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಟೀಂ ಇಂಡಿಯಾವನ್ನು 396 ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ತಂಡವು ಎಂದಿನಂತೆ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ ಜೋಡಿ 10.2 ಓವರ್‌ಗಳಲ್ಲಿ 59 ರನ್‌ಗಳ ಸ್ಪೋಟಕ ಆರಂಭ ಒದಗಿಸಿಕೊಟ್ಟಿತು. 21 ರನ್ ಬಾರಿಸಿ ಮುನ್ನುಗ್ಗುತ್ತಿದ್ದ ಡಕೆಟ್‌ ಅವರನ್ನು ಕುಲ್ದೀಪ್ ಯಾದವ್ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು 23 ರನ್ ಬಾರಿಸಿದ್ದ ಓಲಿ ಪೋಪ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾದರು. ಇದರ ಬೆನ್ನಲ್ಲೇ ಜೋ ರೂಟ್ ಕೂಡಾ 5 ರನ್ ಗಳಿಸಿ ಬುಮ್ರಾಗೆ ಎರಡನೇ ಬಲಿಯಾದರು.

ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟ್ ನಡೆಸಿದ ಆರಂಭಿಕ ಬ್ಯಾಟರ್ ಜಾಕ್ ಕ್ರಾಲಿ ಜವಾಬ್ದಾರಿಯುತ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಜಾಕ್ ಕ್ರಾಲಿ 78 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಬಾರಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಶ್ರೇಯಸ್ ಅಯ್ಯರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಜಾನಿ ಬೇರ್‌ಸ್ಟೋವ್ 25 ರನ್ ಗಳಿಸಿ ಬುಮ್ರಾಗೆ ಮೂರನೇ ಬಲಿಯಾದರೆ, ವಿಕೆಟ್ ಕೀಪರ್ ಬ್ಯಾಟರ್ ಬೆನ್ ಫೋಕ್ಸ್ ಹಾಗೂ ರೆಹೆನ್ ಅಹಮದ್ ತಲಾ 6 ರನ್ ಗಳಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಒಂದು ಕಡೆ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಾಯಕ ಬೆನ್ ಸ್ಟೋಕ್ಸ್‌ 54 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 47 ರನ್ ಗಳಿಸಿ ಬುಮ್ರಾ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಟಾಮ್ ಹಾರ್ಟ್ಲಿ 24 ಎಸೆತಗಳನ್ನು 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 21 ಬಾರಿಸಿ ಬುಮ್ರಾಗೆ 5ನೇ ಬಲಿಯಾದರು. ಆಂಡರ್‌ಸನ್‌ 8 ರನ್‌ ಗಳಿಗೆ ಬುಮ್ರಾಗೆ 6ನೇ ಬಲಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!